ಮಡಿಕೇರಿ, ಮೇ 21: ವೀರಸೇನಾನಿ ಜನರಲ್ ಕೆ.ಎಸ್. ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣದ ಕಾಮಗಾರಿ ಪ್ರಗತಿ ಸಂಬಂಧ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಸಭೆ ನಡೆಯಿತು.
ನಗರದ ಸನ್ನಿಸೈಡ್‍ನಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಮಾತನಾಡಿ ಜನರಲ್ ಕೆ.ಎಸ್. ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣಕ್ಕಾಗಿ ರೂ. 1.96 ಕೋಟಿ ನಿಗದಿಯಾಗಿದ್ದು, ಈಗಾಗಲೇ ರೂ. 37 ಲಕ್ಷ ವೆಚ್ಚದ ಕಾಮಗಾರಿ ನಡೆದಿದೆ. ಸ್ಮಾರಕ ಭವನ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿರ್ಮಿತಿ ಕೇಂದ್ರಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸೈನಿಕರ ನಾಡಿನಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣ ಮಾಡಬೇಕು ಎಂಬ ಉದ್ದೇಶದಿಂದ ಹೆಚ್ಚಿನ ಕಾಳಜಿ ವಹಿಸಲಾಯಿತು. ಆ ದಿಸೆಯಲ್ಲಿ ಸ್ಮಾರಕ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಫೋರಂ ಅಧ್ಯಕ್ಷರು, ಸದಸ್ಯರು, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಮತ್ತಿತರ ಸಹಕಾರದಿಂದ ಚಾಲನೆಗೊಳಿಸಲಾಯಿತು. ಇದಕ್ಕಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ಹೇಳಿದರು.
ಲೆಫ್ಟಿನೆಂಟ್ ಜನರಲ್ ಬಿ.ಸಿ. ನಂದ ಮಾತನಾಡಿ, ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣದ ಕಾಮಗಾರಿ ಚಾಲನೆಗೆ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಅವರ ಮುತುವರ್ಜಿ ಹೆಚ್ಚಿನದ್ದಾಗಿದೆ. ಇವರ ಬದ್ಧತಾ ಕಾರ್ಯದಿಂದ ಕಾಮಗಾರಿ ಆರಂಭವಾಗಲು ಸಾಧ್ಯವಾಯಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಫೋರಂ ಅಧ್ಯಕ್ಷ ಕಂಡ್ರತಂಡ ಸಿ. ಸುಬ್ಬಯ್ಯ ಮಾತನಾಡಿ, ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಕಾಮಗಾರಿ ಅಚ್ಚುಕಟ್ಟು ನಿರ್ವಹಣೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವದು ಎಂದು ಹೇಳಿದರು.
ಕಾಮಗಾರಿ ಮೇಲ್ವಿಚಾರಣೆ ನೋಡಿಕೊಳ್ಳುತ್ತಿರುವ ಪ್ರೇಮನಾಥ್ ಮಾತನಾಡಿ, ಜನರಲ್ ತಿಮ್ಮಯ್ಯ ಸ್ಮಾರಕ ಭವನವನ್ನು ಯಥಾಸ್ಥಿತಿ ಉಳಿಸಿಕೊಂಡು ನವೀನ ಮಾದರಿಯಲ್ಲಿ ಭವನ ನಿರ್ಮಾಣ ಮಾಡಲಾಗುತ್ತದೆ. ಈ ಸಂಬಂಧ ನಿರ್ಮಿತಿ ಕೇಂದ್ರಕ್ಕೆ ಎಲ್ಲಾ ರೀತಿಯ ಸಲಹೆ, ಸಹಕಾರ ನೀಡಲಾಗುತ್ತಿದೆ ಎಂದು ವಿವರಿಸಿದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ ಮಾತನಾಡಿ, ಆರ್‍ಟಿಓ ಕಚೇರಿ ಕಾರ್ಯ ನಿರ್ವಹಿಸುತ್ತಿದ್ದ ದಿನಗಳವರೆಗೆ ಬಾಕಿ ಇರುವ ವಿದ್ಯುತ್ ಬಿಲ್ ಪಾವತಿಸುವಂತೆ ಅವರು ತಿಳಿಸಿದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನ ಕಟ್ಟಡದ ಸುತ್ತಮುತ್ತಲಿನ ಜಾಗವನ್ನು ಬಿಟ್ಟುಕೊಡುವಂತೆ ಆರ್.ಟಿ.ಓ. ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು. ನೂತನ ಆರ್.ಟಿ.ಓ. ಕಚೇರಿ ಬಳಿ ಬದಲಿ ಜಾಗವನ್ನು ಒದಗಿಸಲಾಗುವದು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಇದಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ಅಯ್ಯಂಗಾರ್, ಮೂಲ ಸೌಲಭ್ಯ ಹಾಗೂ ಸಾರಿಗೆ ಸಂಪರ್ಕಕ್ಕೆ ತುಂಬಾ ತೊಂದರೆಯಾಗಲಿದೆ ಎಂದು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದರು.
ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಆರ್.ಜಿ. ಸಚಿನ್ ಈಗಾಗಲೇ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಕಾಮಗಾರಿ ಆರಂಭಿಸಲಾಗಿದ್ದು, ಛಾವಣಿ ಪೂರ್ಣಗೊಳ್ಳುವ ಹಂತದಲ್ಲಿದೆ. ಹಳೇ ಮಾದರಿ ಶೈಲಿಯಲ್ಲಿ ಉಳಿಸಿಕೊಂಡು ಕಾಮಗಾರಿಯನ್ನು ನಿರ್ವಹಿಸಲಾಗುತ್ತಿದೆ. ಸದ್ಯ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಡಬೇಕಿದೆ ಎಂದು ಮನವಿ ಮಾಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್, ನಿರ್ಮಿತಿ ಕೇಂದ್ರದ ಇಂಜಿನಿಯರ್‍ಗಳಾದ ರಾಘವೇಂದ್ರ, ಕರಿಯಪ್ಪ ಮತ್ತಿತರರು ಇದ್ದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣದ ಕಾಮಗಾರಿ ಚಾಲನೆಗೊಳ್ಳಲು ಕಾರಣಕರ್ತರಾದ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಅವರಿಗೆ ಒಡಿಕತ್ತಿ ನೀಡಿ ಗೌರವಿಸಲಾಯಿತು.