ಸೋಮವಾರಪೇಟೆ,ಮೇ 20: ತಾಲೂಕಿನಾದ್ಯಂತ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಅನುದಾನಗಳನ್ನು ಒದಗಿಸುವಂತೆ ಸಾರ್ವಜನಿಕರು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರಿಗೆ ಮನವಿ ಸಲ್ಲಿಸಿ, ನೆರವಿಗಾಗಿ ಮೊರೆಯಿಟ್ಟರು.

ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ನಂತರ ಇದೇ ಪ್ರಥಮ ಬಾರಿಗೆ ಸೋಮವಾರಪೇಟೆಗೆ ಆಗಮಿಸಿ ಗ್ರಾಮ ಪಂಚಾಯಿತಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಶಾಸಕರಿಗೆ, ಗ್ರಾಮಸ್ಥರು ಮನವಿಗಳ ಮಹಾಪೂರ ಹರಿಸಿದರು.

ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಸುನಿಲ್ ಸುಬ್ರಮಣಿ ಅವರು, ಪಂಚಾಯಿತಿ ಆಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಭೆಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರು ಗ್ರಾಮ ವ್ಯಾಪ್ತಿಯಲ್ಲಿರುವ ವಿದ್ಯುತ್, ರಸ್ತೆ, ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಶಾಸಕರ ಗಮನ ಸೆಳೆದರಲ್ಲದೆ, ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯರ ಅನುದಾನದಡಿ ಆದ್ಯತೆಯ ಮೇರೆಗೆ ಈ ಭಾಗಕ್ಕೆ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಕಲ್ಪಿಸಲಾಗುವುದು ಎಂದು ಸುನಿಲ್ ಸುಬ್ರಮಣಿ ಭರವಸೆ ನೀಡಿದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸದಸ್ಯ ಬಿ.ಜೆ. ದೀಪಕ್ ಮಾತನಾಡಿ, ಜಿ.ಪಂ. ಅನುದಾನವನ್ನು ಬಳಸಿಕೊಂಡು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಶ್ರಮಿಸುವದಾಗಿ ಭರವಸೆ ನೀಡಿದರು. ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ಸದಸ್ಯ ಧರ್ಮಪ್ಪ, ಮಾಜೀ ಅಧ್ಯಕ್ಷ ವಿ.ಕೆ. ಲೋಕೇಶ್, ತಾ.ಪಂ. ಕಾರ್ಯನಿರ್ವ ಹಣಾಧಿಕಾರಿ ಚಂದ್ರಶೇಖರ್, ಗ್ರಾ.ಪಂ. ಸದಸ್ಯರುಗಳಾದ ಪ್ರದೀಪ್, ಬಸವರಾಜು, ರೇಖಾ, ಕುಸುಮ, ನೇತ್ರ, ರಜಿತ್, ಪಿಡಿಓ ಬಾಲಕೃಷ್ಣ ರೈ ಅವರುಗಳು ಉಪಸ್ಥಿತರಿದ್ದರು.

ನಂತರ ಬೆಟ್ಟದಳ್ಳಿ, ಶಾಂತಳ್ಳಿ, ಹಾನಗಲ್ಲು, ಚೌಡ್ಲು, ದೊಡ್ಡಮಳ್ತೆ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆಗಳನ್ನು ಆಲಿಸಿದರು. ಗ್ರಾಮೀಣ ರಸ್ತೆಗಳು ಗುಂಡಿಮಯವಾಗಿದ್ದು, ಶಾಸಕರ ನಿಧಿಯಿಂದ ಹೆಚ್ಚಿನ ಅನುದಾನ ಕಲ್ಪಿಸುವಂತೆ ಹೆಚ್ಚಿನ ಮನವಿಗಳು ಸಲ್ಲಿಕೆಯಾದವು.