ಮಡಿಕೇರಿ, ಜೂ. 23: ವಿವಿಧ ಇಲಾಖೆಗಳ ಸಹಕಾರದಲ್ಲಿ ಅರಣ್ಯ ಇಲಾಖೆ ವತಿಯಿಂದ ಜುಲೈ 2 ರಿಂದ ಒಂದು ವಾರಗಳ ಕಾಲ ‘ವನ ಮಹೋತ್ಸವ’ ಅಭಿಯಾನವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಈ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಾಲಾ-ಕಾಲೇಜು, ಅಂಗನವಾಡಿ, ವಿದ್ಯಾರ್ಥಿ ನಿಲಯ, ವಿವಿಧ ಇಲಾಖಾ ವ್ಯಾಪ್ತಿಯಲ್ಲಿ ಒಳಪಡುವ ಸರ್ಕಾರಿ ಸ್ಥಳಗಳಲ್ಲಿ ಹಾಗೆಯೇ ಜಿಲ್ಲಾ ಪಂಚಾಯಿತಿ ಮತ್ತು ಲೋಕೋಪ ಯೋಗಿ ರಸ್ತೆಗಳಲ್ಲಿ ಜಿಲ್ಲೆಯಲ್ಲಿ ಬೇಡಿಕೆ ಇರುವ ಗಿಡಗಳನ್ನು ನೆಡಲು ಮುಂದಾಗಬೇಕು. ಆ ನಿಟ್ಟಿನಲ್ಲಿ ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಗಿಡಗಳಿಗೆ ಬೇಡಿಕೆ ಸಂಬಂಧ ಪ್ರಸ್ತಾವನೆಯನ್ನು ಸಾಮಾಜಿಕ ಅರಣ್ಯ ಇಲಾಖೆಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು. ಸಾಮಾಜಿಕ ಅರಣ್ಯ ಹಾಗೂ ತೋಟಗಾರಿಕಾ ಇಲಾಖಾ ವ್ಯಾಪ್ತಿಯಲ್ಲಿ ಲಭ್ಯವಿರುವ ಗಿಡಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿ.ಪಂ. ಸಿಇಓ ಚಾರುಲತಾ ಸೋಮಲ್ ಅವರು, ಶಾಲಾ-ಕಾಲೇಜು, ಅಂಗನವಾಡಿಗಳು ಸೇರಿದಂತೆ ಎಲ್ಲಾ ಕಡೆಗಳಲ್ಲಿ ಸಸಿಗಳನ್ನು ನೆಡಲು ಮುಂದಾಗಬೇಕು. ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಹೆಚ್ಚಿನ ಆಸಕ್ತಿ ವಹಿಸಬೇಕು. ಆ ನಿಟ್ಟಿನಲ್ಲಿ ಗಿಡಗಳನ್ನು ನೆಡಲು ಶ್ರಮಿಸುವಂತೆ ಅವರು ಸಲಹೆ ಮಾಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಗಿಡಗಳನ್ನು ನೆಡುವಂತಾಗಬೇಕು ಎಂದು ಅವರು ಹೇಳಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಎಡುಕೊಂಡಲು ಮಾತನಾಡಿ, ಸಿಲ್ವರ್, ನಂದಿ, ಮಹಾಗನಿ, ಮಾವು, ಹಲಸು, ನೇರಳೆ, ಬಿದಿರು ಮತ್ತಿತರ ಗಿಡಗಳನ್ನು ಸಾಮಾಜಿಕ ಅರಣ್ಯ ಇಲಾಖಾ ವತಿಯಿಂದ ಒದಗಿಸಲಾಗುವದು. ತಮ್ಮ ತಮ್ಮ ವ್ಯಾಪ್ತಿಯಲ್ಲಿ ಗಿಡಗಳನ್ನು ನೆಡಲು ಕ್ರಮವಹಿಸುವಂತೆ ಅವರು ಕೋರಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಓ.ಆರ್. ಶ್ರೀರಂಗಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಮಪ್ಪ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಪದ್ಮಶೇಖರ ಪಾಂಡೆ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಟಿ. ಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ, ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ. ಸುರೇಶ್, ಐಟಿಡಿಪಿ ಇಲಾಖೆ ಕೆ.ಹೆಚ್. ಸತೀಶ್, ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆ.ಟಿ. ದರ್ಶನ್, ಜಿ.ಪಂ. ಇಂಜಿನಿಯರ್ ಶಶಿಧರ, ನಾಯ್ಕೋಡು, ತೋಟಗಾರಿಕಾ ಅಧಿಕಾರಿ ಮತ್ತಿತರರು ಇದ್ದರು.