ಮಡಿಕೇರಿ, ಜೂ. 24: ಜಿಲ್ಲಾಡಳಿತ ವತಿಯಿಂದ ಪ್ರತೀ ತಿಂಗಳು ಜನಸಂಪರ್ಕ ಸಭೆ ಹಮ್ಮಿಕೊಳ್ಳಲಾಗುವದು. ಅದೇ ಮಾದರಿಯಲ್ಲಿ ವಿವಿಧ ಇಲಾಖಾ ವ್ಯಾಪ್ತಿಯಲ್ಲಿ ಜನಸಂಪರ್ಕ ಸಭೆ ಆಯೋಜಿಸುವಂತೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಸಲಹೆ ಮಾಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ ಅವರು ಮಾತನಾಡಿದರು.
ಜನಸಂಪರ್ಕ ಸಭೆಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಇದರಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚಿನ ಅರ್ಜಿಗಳಿವೆ. ಆದರೆ ಇತರ ಇಲಾಖೆಗಳಲ್ಲಿ ಸಮಸ್ಯೆ ಇಲ್ಲ ಎಂದು ಭಾವಿಸಬೇಕಿಲ್ಲ. ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಜನಸಂಪರ್ಕ ಸಭೆ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕುಂದುಕೊರತೆ ಸಂಬಂಧ ಪ್ರತಿನಿತ್ಯ ಜಿಲ್ಲಾಧಿಕಾರಿಯವರ ಕಚೇರಿಗೆ ಅಹವಾಲು ಹೇಳಿಕೊಂಡು ಬರುತ್ತಾರೆ. ಆದರೆ ಸಾರ್ವಜನಿಕವಾಗಿ ಮಾಹಿತಿ ಇರುವದಿಲ್ಲ. ವಿಶೇಷ ಜನಸಂಪರ್ಕ ಸಭೆ ಮಾಡಿದಾಗ ಸಾರ್ವಜನಿಕರಿಗೆ ಮಾಹಿತಿ ತಿಳಿಯಲಿದೆ. ಆ ದಿಸೆಯಲ್ಲಿ ತಾವುಗಳು ಸಹ ಜನಸಂಪರ್ಕ ಸಭೆಯ ದಿನಾಂಕ ನಿಗದಿ ಮಾಡಿ ಮಾಧ್ಯಮಗಳಿಗೆ ಮುಂಚಿತವಾಗಿ ಮಾಹಿತಿ ನೀಡಿ ತಮ್ಮ ಇಲಾಖಾ ವ್ಯಾಪ್ತಿಯ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಹೆಚ್ಚಿನ ಕಾಳಜಿ ವಹಿಸುವಂತೆ ಜಿಲ್ಲಾಧಿಕಾರಿ ನುಡಿದರು. ಜನಸಂಪರ್ಕ ಸಭೆಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು. ಜನಸಾಮಾನ್ಯರಿಗೆ ವಿವಿಧ ಇಲಾಖೆಗಳಿಂದ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಬಗ್ಗೆ ಮಾಧ್ಯಮಗಳ ಮೂಲಕ ಮಾಹಿತಿ ದೊರೆಯುವಂತಾಗಬೇಕು. ಯಾವದೇ ಅಭಿವೃದ್ಧಿ ಕೆಲಸಗಳನ್ನು ಮಾಡುವಾಗ ಮುಂಚಿತವಾಗಿ ಮಾಹಿತಿ ನೀಡುವಂತೆ ನಿರ್ದೇಶನ ನೀಡಿದರು. ಅನೇಕ ಸಮಸ್ಯೆಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಹಾಗೂ ಮಾನವೀಯ ದೃಷ್ಟಿಯಿಂದ ನೋಡಬೇಕಾಗುತ್ತದೆ. ಮುಂದಿನ ತಿಂಗಳು ಇದೇ ರೀತಿ ಕುಂದು ಕೊರತೆ ಸಭೆ ನಡೆಸಲಾಗುವದು. ಕಾನೂನಿನ ಚೌಕಟ್ಟಿನಲ್ಲಿ ಸಾರ್ವಜನಿಕರಿಗೆ ಸ್ಪಂದಿಸುವಲ್ಲಿ ಮುಂದಾಗಬೇಕು. ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಮಾತನಾಡಿ, ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಒಂದು ವಾರದೊಳಗೆ ಪರಿಶೀಲಿಸಿ ಪ್ರಥಮ ಆದ್ಯತೆಯಲ್ಲಿ ಬಗೆಹರಿಸಬೇಕು. ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಸಮಸ್ಯೆ ಇತ್ಯರ್ಥಪಡಿಸಲು ಆಗದಿದ್ದಲ್ಲಿ ಜಿಲ್ಲಾಧಿಕಾರಿ ಅವರ ಗಮನಕ್ಕೆ ತರುವಂತಾಗಬೇಕು ಎಂದು ನಿರ್ದೇಶನ ನೀಡಿದರು.
ಅರ್ಜಿದಾರರೊಬ್ಬರು ಬಾಣೆ ಭೂಮಿಗೆ ಕಂದಾಯ ನಿಗದಿಪಡಿಸುವಂತಾಗಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಾಣೆ ಭೂಮಿಗೆ ಕಂದಾಯ ನಿಗದಿಪಡಿಸುವಂತಾಗಲು ಶೀಘ್ರದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ ಅವರು ಸರ್ವೆ ವ್ಯಾಪ್ತಿಗೆ ಒಳಪಟ್ಟಿರುವ ಭೂಮಿಗೆ ಕಂದಾಯ ನಿಗದಿ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಸಾರ್ವಜನಿಕರ ಕುಂದುಕೊರತೆಯನ್ನು ಆಲಿಸಿದ ಜಿಲ್ಲಾಧಿಕಾರಿ, ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥಕ್ಕೆ ಪ್ರಯತ್ನಿಸಲಾಗುವದು ಎಂದು ತಿಳಿಸಿದರು.
ಜನಸಂಪರ್ಕ ಸಭೆ ಸಂಬಂಧಿಸಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು, ಆರ್.ಟಿ.ಸಿ., ಅಕ್ರಮ-ಸಕ್ರಮ, ಹಕ್ಕುಪತ್ರ ವಿತರಣೆ, ಮನೆ ನಿರ್ಮಾಣ, ಸುಗಮ ರಸ್ತೆ, ಮೂಲ ಸೌಕರ್ಯ ಮತ್ತಿತರ ಕುಂದುಕೊರತೆ ಸಂಬಂಧಿಸಿದಂತೆ 20 ರಿಂದ 30 ಅರ್ಜಿಗಳು ಸಲ್ಲಿಕೆಯಾಗಿದ್ದು, ಕಾನೂನು ಚೌಕಟ್ಟಿನಲ್ಲಿ ಈಗ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಶೀಘ್ರ ವಿಲೇವಾರಿಗೆ ಕ್ರಮವಹಿಸಲಾಗುವದು ಎಂದು ಹೇಳಿದರು.
ಆರ್.ಟಿ.ಸಿ.ಯಲ್ಲಿ ಬೆಳೆ ನಮೂದು ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಈ ಬಗ್ಗೆ ಗಮನಕ್ಕೆ ಬಂದಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ವೈದ್ಯರ ಕೊರತೆ ಇದೆ. ಡೆಂಗಿ, ಚಿಕೂನ್‍ಗುನ್ಯಾ ರೋಗ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ವೈದ್ಯರ ವಿಶೇಷ ತಂಡ ರಚಿಸಿ ತಂಡವು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡುವಂತಾಗಲು ಅಗತ್ಯ ಕ್ರಮಕೈಗೊಳ್ಳಲು ಡಿ.ಹೆಚ್.ಓ. ಅವರಿಗೆ ನಿರ್ದೇಶನ ನೀಡಲಾಗಿದೆ. ಚಿಕೂನ್‍ಗುನ್ಯಾ, ಡೆಂಗಿ ಪ್ರದೇಶಗಳಲ್ಲಿ ರಕ್ತಪರೀಕ್ಷೆ, ವೈದ್ಯಕೀಯ, ಔಷಧ ನೆರವು ಮತ್ತಿತರ ಅಗತ್ಯ ಕ್ರಮ ಕೈಗೊಳ್ಳುವಂತೆ ಡಿ.ಹೆಚ್.ಓ. ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ವಿವರಿಸಿದರು.
ಶಾಲಾ ವಾಹನಗಳು ಹೆಚ್ಚಿನ ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತವೆ. ಈ ಬಗ್ಗೆ ಗಮನಹರಿಸುವಂತಾಗಬೇಕು ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ರಸ್ತೆ ಸುರಕ್ಷಾ ಜಾಗೃತಿ ಸಂಬಂಧಿಸಿದಂತೆ ಸಭೆ ನಡೆಯಲಿದೆ ಎಂದು ಅವರು ಹೇಳಿದರು. ದೇವಟ್ ಪರಂಬು ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಜಿಲ್ಲಾಡಳಿತ ಶಾಂತಿ ಕಾಪಾಡಲು ಕಾಲ ಕಾಲಕ್ಕೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.