ಕುಶಾಲನಗರ, ಜೂ. 22: ನದಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ರಮುಖವಾಗಿ ನದಿ ತಟಗಳ ಜನತೆಯಲ್ಲಿ ಜಾಗೃತಿ ಮೂಡಬೇಕಿದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.

ಕಾರ ಹುಣ್ಣಿಮೆ ಅಂಗವಾಗಿ ಕುಶಾಲನಗರ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ನದಿ ತಟದ ಮಹಾ ಆರತಿ ಕ್ಷೇತ್ರದಲ್ಲಿ ನಡೆದ 54ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಂಸ್ಕøತಿಯ ಮೂಲವಾದ ನದಿಗಳ ಸಂರಕ್ಷಣೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಾಧುಸಂತರು ಮೂಲ ಕಾವೇರಿ ಕ್ಷೇತ್ರದಿಂದ ಪೂಂಪ್‍ಹಾರ್ ವರೆಗೆ ನದಿ ತಟಗಳ ಜನತೆಯಲ್ಲಿ ಜಾಗೃತಿ ಮೂಡಿಸಲು ಕೈಗೊಂಡಿರುವ ಪಾದಯಾತ್ರೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ತೊರೆನೂರು ವಿರಕ್ತ ಮಠದ ಮಲ್ಲೇಶ ಸ್ವಾಮೀಜಿ ಪಾಲ್ಗೊಂಡು ಕಾವೇರಿ ಬಚಾವೋ ಆಂದೋಲನದ ಅಂಗವಾಗಿ ಪಾದಯಾತ್ರೆ ಕೈಗೊಂಡಿರುವ ಸಾಧುಸಂತರ ತಂಡದ ಸದಸ್ಯರಿಗೆ ಶುಭ ಹಾರೈಸಿದರು.

ಈ ಸಂದರ್ಭ ಅಖಿಲ ಭಾರತ ಸನ್ಯಾಸಿ ಸಂಘದ ಸಂಚಾಲಕರು ಹಾಗೂ ಪಾದಯಾತ್ರೆ ತಂಡದ ಪ್ರಮುಖ ಶ್ರೀ ರಮಾನಂದ ಸ್ವಾಮೀಜಿ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಂಸ್ಥಾಪಕ ಗಣೇಶ ಸ್ವರೂಪಾನಂದ ಗಿರಿ ಸ್ವಾಮೀಜಿ ಮತ್ತು ತಂಡದ ಸಾಧುಸಂತರು ಕಾವೇರಿ ನದಿಗೆ ಮಹಾ ಆರತಿ ಬೆಳಗಿದರು.

ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ಅರ್ಚಕÀ ಕೃಷ್ಣಮೂರ್ತಿ ಭಟ್ ಅಷ್ಟೋತ್ತರ, ಅರ್ಚನೆ ನಡೆಸಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಜಿಲ್ಲಾ ಪಂಚಾಯ್ತಿ ಸದಸ್ಯೆ ಕೆ.ಆರ್.ಮಂಜುಳಾ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಂಚಾಲಕ ಎಂ.ಎನ್. ಚಂದ್ರಮೋಹನ್, ಗಣಪತಿ ದೇವಾಲಯ ಸಮಿತಿ ಅಧ್ಯಕ್ಷ ವಿ.ಎನ್. ವಸಂತಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ, ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ದಲಿತ ಸಂಘರ್ಷ ಸಮಿತಿ ಸಂಚಾಲಕ ಕೆ.ಬಿ.ರಾಜು, ನದಿ ಸ್ವಚ್ಛತಾ ಆಂದೋಲನ ಸಮಿತಿ ಪ್ರಮುಖರಾದ ಡಿ.ಆರ್. ಸೋಮಶೇಖರ್, ಮಂಡೇಪಂಡ ಬೋಸ್ ಮೊಣ್ಣಪ್ಪ, ಕೆ.ಆರ್. ಶಿವಾನಂದನ್, ಜಗದೀಶ್, ಕೆ.ಜಿ. ಮನು, ಬಿ.ಜೆ. ಅಣ್ಣಯ್ಯ, ಶಿವಶಂಕರ್, ಭಾಸ್ಕರ್ ನಾಯಕ್, ಮಹಿಳಾ ಭಜನಾ ಮಂಡಳಿ ಸದಸ್ಯರು ಇದ್ದರು.