ಮಡಿಕೇರಿ, ಜೂ. 25: ‘ಜವಾಬ್ದಾರಿ ನಿಭಾಯಿಸಿ ಯೋಜನೆ ರೂಪಿಸಿ’ ಎಂಬ ಘೋಷ ವಾಕ್ಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಹಮ್ಮಿಕೊಳ್ಳುವ ಕುರಿತು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ಸಂದರ್ಭ ಮಾಹಿತಿ ನೀಡಿದ ಕುಟುಂಬ ಕಲ್ಯಾಣಾಧಿಕಾರಿ ಡಾ. ಆಶಾ ಅವರು ಜನಸಂಖ್ಯಾ ಸ್ಫೋಟದಿಂದ ಆಗುವ ಪರಿಣಾಮಗಳು ಹಾಗೂ ಕುಟುಂಬ ಕಲ್ಯಾಣ ಕಾರ್ಯಕ್ರಮ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ 5,54,519 ಜನಸಂಖ್ಯೆ ಇದ್ದು, 81 ಸಾವಿರ ದಂಪತಿಗಳು, 13,636 ಒಂದು ಮಗು ಒಳಗೊಂಡಿ ರುವವರು, 39,338 ಮಂದಿ ಎರಡು ಮಗು ಇರುವವರು, 15,006 ಮಂದಿ ಮೂರು ಮಕ್ಕಳನ್ನು ಹೊಂದಿರುವವರು, 4,434 ನಾಲ್ಕು ಮಕ್ಕಳನ್ನು ಹೊಂದಿರುವವರು ಹಾಗೂ 2,179 ಮಂದಿ 5 ಮತ್ತು ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರ ಸಂಖ್ಯೆ ಇದೆ. ಜನಸಂಖ್ಯಾ ಸ್ಫೋಟ ಹಾಗೂ ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ವಿವಿಧ ಇಲಾಖೆಗಳು ಹಾಗೂ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ತಾ. 27 ರಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಓ.ಆರ್. ಶ್ರೀರಂಗಪ್ಪ ಅವರು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಶಿಕ್ಷಣ ಅರಿವು ಮೂಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಜಿಲ್ಲೆಯಲ್ಲಿ ಮಹಿಳೆಯರಲ್ಲಿ ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಬೇಕಿದೆ. ಆ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವದು ಅಗತ್ಯ ಎಂದು ಸಲಹೆ ಮಾಡಿದರು. ಡಿಡಿಪಿಐ ಬಸವರಾಜು ಮಾತನಾಡಿ, ಅಪೌಷ್ಟಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ಮಕ್ಕಳಿಗೆ ಕಬ್ಬಿಣಾಂಶ ಮತ್ತು ವಿಟಮಿನ್ ಮಾತ್ರೆ ನೀಡಲಾಗುತ್ತದೆ. ಹಾಗೆಯೇ ಹಾಲು ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ ಅವರು ರೇಡಿಯೋ, ಬೀದಿನಾಟಕ ಮೂಲಕ ಜಾಗೃತಿ ಮೂಡಿಸುವದು ಅಗತ್ಯ. ಎನ್.ಜಿ.ಒ.ಗಳ ಸಹಕಾರದಲ್ಲಿ ಆರೋಗ್ಯ ಶಿಕ್ಷಣ ನೀಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ಜಿಲ್ಲಾ ಸರ್ಜನ್ ಡಾ. ಮುತ್ತಪ್ಪ, ಆರ್.ಸಿ.ಎಚ್. ಅಧಿಕಾರಿ ಡಾ. ಪಾರ್ವತಿ, ತಾಲೂಕು ವೈದ್ಯಾಧಿಕಾರಿಗಳಾದ ಡಾ. ಗುರುರಾಜ್, ಡಾ. ರವಿಕುಮಾರ್, ಮಹಿಳಾ ಅಭಿವೃದ್ಧಿ ಅಧಿಕಾರಿ ಮಮ್ತಾಜ್ ಮತ್ತಿತರರು ಹಲವು ಮಾಹಿತಿ ನೀಡಿದರು.