ಬೆಂಗಳೂರು, ಜು. ೧೪: ಕನ್ನಡದ ಹಿರಿಯ ನಟಿ, ಪಂಚಭಾಷಾ ತಾರೆ ಬಿ. ಸರೋಜಾದೇವಿ (೮೭) ಅವರು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

೧೯೩೮ರ ಜನವರಿ ೭ರಂದು ಬೆಂಗಳೂರಿನಲ್ಲಿ ಜನಿಸಿದ ಸರೋಜಾ ದೇವಿ ತಮ್ಮ ನಟನೆಯ ಮೂಲಕ ಭಾರತ ಚಿತ್ರರಂಗದಲ್ಲಿ ಹೆಸರುಗಳಿಸಿದ್ದರು. ಇವರ ನಟನೆಗೆ ‘ಅಭಿನಯ ಸರಸ್ವತಿ’ ಎಂಬ ಬಿರುದು ಕೂಡ ಲಭಿಸಿತ್ತು.. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು ೧೯೫೫ ರಿಂದ ೧೯೮೪ ರವರೆಗೆ ಸತತವಾಗಿ ೧೬೧ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು.

ಸರೋಜಾದೇವಿ ಅವರು ಕನ್ನಡ ಚಲನಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ಮಹಾನ್ ನಟಿಯಾಗಿದ್ದು, ದಕ್ಷಿಣ ಭಾರತದ ಧೀಮಂತ ಅಭಿನೇತ್ರಿ. ಸುಮಾರು ೬ ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು ೫ ಭಾಷೆಗಳಲ್ಲಿ ೨೦೦ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ತಮ್ಮ ೧೭ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ' ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.

ಸರೋಜಾದೇವಿ ಅವರು ೧೯೬೯ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು ೧೯೯೨ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನಿಂದ ಕಲೈಮಾಮಣಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.