ಮಡಿಕೇರಿ, ಜು. ೧೬: ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯ ಸೇವೆಗಳ ಸಮರ್ಪಕ ಅನುಷ್ಠಾನ ಹಾಗೂ ವೈದ್ಯರ ನೇಮಕಕ್ಕೆ ಕ್ರಮವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಮುಖ್ಯಮಂತ್ರಿ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ಮನವಿ ಮಾಡಿದರು.
ವಿಧಾನಸೌಧದಲ್ಲಿ ಸಚಿವರನ್ನು ಭೇಟಿಯಾದ ಪೊನ್ನಣ್ಣ ಅವರು, ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಗೆ ಸಂಬAಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಮಾತುಕತೆ ನಡೆಸಿದರು.
ಜನರ ಅವಶ್ಯಕತೆಗಳು ಹಾಗೂ ಆರೋಗ್ಯ ಸಮಸ್ಯೆಗಳ ಬಗ್ಗೆ ಸವಿವರವಾಗಿ ಆರೋಗ್ಯ ಸಚಿವರಿಗೆ ವಿವರಿಸಿ ಆಸ್ಪತ್ರೆಗಳ ಮೇಲ್ದರ್ಜೆಗೇರಿಸುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮನವಿ ಮಾಡಿದರು. ವಿಶೇಷವಾಗಿ ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಗಳ ಮೇಲ್ದರ್ಜೆಗೆ ಬಜೆಟ್‌ನಲ್ಲಿ ಅನುಮೋದನೆ ದೊರಕಿರುವುದರ ಬಗ್ಗೆಯೂ ಮಾಹಿತಿ ಒದಗಿಸಿದರು.
ಸಮುದಾಯ ಆರೋಗ್ಯ ಕೇಂದ್ರಗಳ ಬಗ್ಗೆ ಹಾಗೂ ವೈದ್ಯರುಗಳ ಕೊರತೆಯ ಬಗ್ಗೆ ಸಚಿವರ ಗಮನ ಸೆಳೆದಾಗ, ಕೂಡಲೇ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಪೊನ್ನಣ್ಣ ತಿಳಿಸಿದ್ದಾರೆ.
ಸಭೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.