ಮಡಿಕೇರಿ, ಜು. ೧೮: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವೈದ್ಯಕೀಯ ತರಬೇತಿ ಕೇಂದ್ರ’ ಆರಂಭಿಸಲು ಚಿಂತಿಸಲಾಗಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ವತಿಯಿಂದ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ‘ಗೃಹ ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೊಡಗು ಜಿಲ್ಲೆಗೆ ಸರ್ಕಾರ ಕಳೆದ ಎರಡು ವರ್ಷದಲ್ಲಿ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ ೪೧ ಕೋಟಿ ರೂ. ಬಿಡುಗಡೆ ಮಾಡಿದೆ. ಹಾಗೆಯೇ ವೀರಾಜಪೇಟೆ ತಾಲೂಕು ಆಸ್ಪತ್ರೆಯನ್ನು ೪೦೦ ಹಾಸಿಗೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಿಟಿ ಸ್ಕಾö್ಯನ್ ಜೊತೆಗೆ ಎಂಆರ್ಐ ಸ್ಕಾö್ಯನ್ ಸಹ ೧೦ ಕೋಟಿ ರೂ. ವೆಚ್ಚದಲ್ಲಿ ಆರಂಭವಾಗಿದೆ ಎಂದು ವಿವರಿಸಿದರು.
ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ತೆರಳುತ್ತಿದ್ದರು. ಈಗ ಸರ್ಕಾರ ಆದಷ್ಟು ಹೆಚ್ಚಿನ ಆರೋಗ್ಯ ಸೇವೆ ಕಲ್ಪಿಸಿದ್ದು, ಮಡಿಕೇರಿಯಲ್ಲಿಯೇ ಚಿಕಿತ್ಸೆ ಪಡೆಯಬಹುದಾಗಿದೆ. ನಮ್ಮ ಕುಟುಂಬದಿAದಲೇ ಗೃಹ ಆರೋಗ್ಯವನ್ನು ಅನುಸರಿಸುವಂತಾಗಬೇಕು. ಇದರಿಂದ ಇತರರಿಗೆ ಮಾಹಿತಿ ನೀಡಬಹುದಾಗಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ, ಮನೆ ಮನೆಗೆ ಆರೋಗ್ಯ ಸೇವೆಗಳು ಕಾರ್ಯಕ್ರಮದ ಘೋಷಣೆಯಡಿ ಅಸಾಂಕ್ರಾಮಿಕ ರೋಗಗಳ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಯನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಚಿಕಿತ್ಸೆ ನೀಡುವುದಾಗಿದೆ. ಪ್ರತೀ ದಿನ ೩ ಲೀ. ನೀರು ಕುಡಿಯುವುದು, ಆರೋಗ್ಯಕರ ತೂಕವನ್ನು ನಿರ್ವಹಿಸುವುದು, ೩೦ ನಿಮಿಷ ವ್ಯಾಯಾಮ ಮಾಡುವುದು, ಆರೋಗ್ಯಕರ ಆಹಾರ ಸೇವಿಸಿ, ಹೆಚ್ಚು ಹಣ್ಣು ಮತ್ತು ತರಕಾರಿಯನ್ನು ಸೇವಿಸುವುದು, ನಿಯಮಿತವಾಗಿ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ ಮಾಡಿಸುವುದು, ನಿಗದಿತ ಸಮಯಕ್ಕೆ ಔಷಧಿ ಸೇವಿಸಬೇಕು ಎಂದು ಮಾಹಿತಿ ನೀಡಿದರು. ಆಲೂರು ಸಿದ್ದಾಪುರ ಹಾಗೂ ಶನಿವಾರ ಸಂತೆ ವೈದ್ಯಾಧಿಕಾರಿಗಳಾದ ಡಾ.ಸುಪರ್ಣ ಮತ್ತು ಡಾ.ಅಶೋಕ್ ಅವರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಸಮಸ್ಯೆ ಬಗ್ಗೆ ಶಾಸಕರ ಗಮನಕ್ಕೆ ತಂದರು.
ಇದೇ ಸಂದರ್ಭದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರು ಸರ್ಕಾರ ಹೊರ ತಂದಿರುವ ಗೃಹ ಆರೋಗ್ಯ ಹೊತ್ತಿಗೆಯನ್ನು ಬಿಡುಗಡೆ ಮಾಡಿದರು.
ಜಿ.ಪಂ.ಉಪ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾ ಸರ್ಜನ್ ಡಾ.ನಂಜುAಡಯ್ಯ, ಡಾ.ಸನತ್, ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಡಾ.ಶಾಂಭವಿ, ತಾಲೂಕು, ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಶ್ರುಶ್ರೂಷಕರು, ಆಶಾ ಕಾರ್ಯಕರ್ತರು, ಇತರರು ಇದ್ದರು. ಅಶ್ವಿನಿ ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ನಿರೂಪಿಸಿ, ವಂದಿಸಿದರು.