ಕೂಡಿಗೆ, ಜು. ೧೯: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರ ಸಮೀಪ ಬ್ಯಾಡಗೊಟ್ಟ ಗ್ರಾಮದಲ್ಲಿ ಪುನರ್ವಸತಿ ಕೇಂದ್ರದ ಅಂಗನವಾಡಿ ಕೇಂದ್ರದಲ್ಲಿ ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಡೆಂಗ್ಯೂ ರೋಗಗಳ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಭೆ ನಡೆಯಿತು.
ಡೆಂಗ್ಯೂ ರೋಗ ಮುಂಜಾಗ್ರತಾ ಕ್ರಮಗಳ ಬಗ್ಗೆ ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಾನಿಯಾ ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಸಾಂಕ್ರಾಮಿಕ ರೋಗಗಳ ಬಗ್ಗೆ ಹಾಗೂ ಅಸಾಂಕ್ರಾಮಿಕ ರೋಗಗಳ ಬಗ್ಗೆ, ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಕೂಡಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಹಾಗೂ ಚರಂಡಿಗಳ ಸ್ವಚ್ಛತೆ ಬಗ್ಗೆ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಕೂಡಿಗೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪುನಿತ್, ಆರೋಗ್ಯ ನಿರೀಕ್ಷಕರಾದ ಸಂಜಯ್, ಸಮುದಾಯ ಆರೋಗ್ಯ ಅಧಿಕಾರಿ ದೀಪು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಮತ್ತು ಹಾಡಿಯ ಮುಖಂಡರು ಹಾಜರಿದ್ದರು.