ಸೋಮವಾರಪೇಟೆ, ಜು. ೩೦: ಕಾರ್ಮಿಕರ ಮಕ್ಕಳಿಗೆ ವಸತಿ ಯೊಂದಿಗೆ ಗುಣಮಟ್ಟದ ವಿದ್ಯಾಭ್ಯಾಸ ಒದಗಿಸುವ ನಿಟ್ಟಿನಲ್ಲಿ ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ಶಾಲೆಗೆ ಕಾರ್ಮಿಕ ಇಲಾಖೆಯಿಂದ ರೂ. ೩೭.೫೫ ಕೋಟಿ ಅನುದಾನಕ್ಕೆ ಸರ್ಕಾರ ಅನುಮೋದನೆ ನೀಡಿದೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ರೂ. ೩೭.೫೫ ಕೋಟಿ ವೆಚ್ಚದಲ್ಲಿ ಗೌಡಳ್ಳಿಯ ಚನ್ನಾಪುರ ಗ್ರಾಮದಲ್ಲಿ ೬ ರಿಂದ ೧೨ನೇ ತರಗತಿಯವರೆಗೆ ವಸತಿ ಶಾಲೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಕಾರ್ಮಿಕ ಇಲಾಖೆಯ ಪ್ರಸ್ತಾವನೆಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯು ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ರಾಜ್ಯದ ೩೧ ಜಿಲ್ಲೆಗಳಲ್ಲಿ ವಸತಿ ಶಾಲೆಗಳನ್ನು ಸ್ಥಾಪಿಸಲು ಹಾಗೂ ಶಾಲೆಗಳ ನಿರ್ವಹಣಾ ವೆಚ್ಚವನ್ನು ಮಂಡಳಿಯ ನಿಧಿಯಿಂದ ಭರಿಸಲು ಸರ್ಕಾರ ಅನುಮೋದನೆ ನೀಡಿದ್ದು, ಕೊಡಗು ಜಿಲ್ಲೆಯ ಮಟ್ಟಿಗೆ ಸೋಮವಾರಪೇಟೆ ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ವಸತಿ ಶಾಲೆ ನಿರ್ಮಾಣವಾಗಲಿದೆ.
ಸೋಮವಾರಪೇಟೆ ತಾಲೂಕಿನಲ್ಲಿ ಶಾಲೆ ನಿರ್ಮಾಣಕ್ಕೆ ಸಹಕಾರ ನೀಡಿದ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖಾ ಸಚಿವ ಸಂತೋಷ್ ಲಾಡ್ ಅವರನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಿದರು.