ಸಿದ್ದಾಪುರ, ಆ. ೧: ಕರಡಿಗೋಡು ಗ್ರಾಮದಲ್ಲಿ ಕಾಡಾನೆ ಕಾರ್ಮಿಕರ ಮೇಲೆ ದಾಳಿ ನಡೆಸಿದ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ ಒಂದು ವಾರಗಳ ಒಳಗೆ ಕರಡಿಗೋಡು ಗ್ರಾಮದ ವ್ಯಾಪ್ತಿಯಲ್ಲಿ ಕಾಡಾನೆಗಳು ನಾಲ್ಕು ಮಂದಿ ಕಾರ್ಮಿಕರ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಕರಡಿಗೋಡು ಗ್ರಾಮದ ವ್ಯಾಪ್ತಿಯಲ್ಲಿ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ದಾಂಧಲೆ ನಡೆಸುತ್ತಿರುವ ಕಾಡಾನೆಗಳ ಹಿಂಡನ್ನು ವೈಜ್ಞಾನಿಕವಾಗಿ ಕಾಡಿಗಟ್ಟುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈಗಾಗಲೇ ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಅವರು ಕಾಡಾನೆಗಳು ಹೆಚ್ಚಾಗಿ ಸಂಚರಿಸುತ್ತಿರುವ ಭಾಗದಲ್ಲಿ ಅಂತಹ ಗುಂಪುಗಳನ್ನು ಗುರುತಿಸಿ ಗುಂಪಿನಲ್ಲಿರುವ ಕಾಡಾನೆಗಳ ಪೈಕಿ ಕೆಲವು ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲು ಅನುಮತಿಯನ್ನು ಸರಕಾರದಿಂದ ಪಡೆದುಕೊಂಡಿರುತ್ತಾರೆ. ಆದರೂ ಕಾಡಾನೆಗಳ ಹಿಂಡುಗಳಿAದ ಬೇರ್ಪಟ್ಟು ಓಡಾಡುತ್ತಿರುವ ಕಾಡಾನೆಗಳನ್ನು ಸೆರೆಹಿಡಿದು ಅವುಗಳಿಗೆ ರೇಡಿಯೋ ಕಾಲರ್ ಅಳವಡಿಸದಿರುವ ಬಗ್ಗೆ ಅರಣ್ಯ ಇಲಾಖಾಧಿಕಾರಿಗಳ ಬಳಿ ಪ್ರಶ್ನಿಸಿದರು. ಕೂಡಲೇ ಕರಡಿಗೋಡು ಭಾಗದಲ್ಲಿ ಸಂಚರಿಸುತ್ತಿರುವ ಕಾಡಾನೆಗಳ ಗುಂಪಿನಲ್ಲಿ ಇರುವ ಸಲಗಗಳನ್ನು ಸೆರೆ ಹಿಡಿದು ರೇಡಿಯೋ ಕಾಲರ್ ಅಳವಡಿಸುವಂತೆ ಸೂಚನೆ ನೀಡಿದರು.
ಈ ಭಾಗದಲ್ಲಿ ಕಾರ್ಮಿಕರು ಕಾಫಿ ತೋಟಗಳಿಗೆ ಕೆಲಸಕ್ಕೆ ತೆರಳಲು ಭಯಪಡುವಂತ ಪರಿಸ್ಥಿತಿ ನಿರ್ಮಾಣವಾಗಿದ್ದು ಈ ಹಿನ್ನೆಲೆಯಲ್ಲಿ ಕಾರ್ಮಿಕರು ಬೆಳಿಗ್ಗೆ ಹಾಗೂ ಸಂಜೆ ಕೆಲಸಕ್ಕೆ ತೆರಳಿ ಹಿಂತಿರುಗಿ ಬರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ವತಿಯಿಂದ ಸಿಬ್ಬಂದಿಗಳನ್ನು ನೇಮಿಸಿ ಕಾರ್ಮಿಕರಿಗೆ ಭದ್ರತೆ ಒದಗಿಸಿ ಕೊಡಬೇಕೆಂದು ಸಂಕೇತ್ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಶಾಸಕ ಪೊನ್ನಣ್ಣನವರ ಮುಖಾಂತರ ಈ ಭಾಗದಲ್ಲಿ ಉಪಟಳ ನೀಡುವ ಹಾಗೂ ಮಾನವನ ಮೇಲೆ ದಾಳಿ ಮಾಡುವ ಕಾಡಾನೆಗಳನ್ನು ಸೆರೆ ಹಿಡಿಯಲು ಸರಕಾರದಿಂದ ಅನುಮತಿ ಪಡೆದು ಅವುಗಳನ್ನು ಸ್ಥಳಾಂತರಗೊಳಿಸಲು ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದರು. ಇದಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು. ಈಗಾಗಲೇ ಸಿದ್ದಾಪುರ ಭಾಗದಲ್ಲಿ ಕಾಡಾನೆಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಶ್ವತ ಯೋಜನೆಯನ್ನು ರೂಪಿಸಲು ಶಾಸಕ ಪೊನ್ನಣ್ಣ ಅವರು ಕಂದಕ ನಿರ್ಮಾಣ ಹಾಗೂ ರೈಲ್ವೆ ಬ್ಯಾರಿಕೇಡ್ ಸೇರಿದಂತೆ ಇನ್ನಿತರ ಯೋಜನೆಗಳಿಗೆ ಸರ್ಕಾರದಿಂದ ವಿಶೇಷ ಅನುದಾನವನ್ನು ಬಿಡುಗಡೆ ಗೊಳಿಸಿದ್ದಾರೆ. ಸದ್ಯದಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸುವುದಾಗಿ ವಿವರಿಸಿದರು. ಇದೇ ಸಂದರ್ಭದಲ್ಲಿ ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಬಳಿ ತೆರಳಿ ಮಾತನಾಡಿದ ಸಂಕೇತ್ ಪೂವಯ್ಯ ಕಾರ್ಮಿಕರು ಬೆಳಿಗ್ಗೆ ಹಾಗೂ ಸಂಜೆ ಕೆಲಸ ಬಿಟ್ಟು ತೆರಳುವ ಸಂದರ್ಭ ಕಾಡಾನೆಗಳ ಸಂಚಾರದ ಬಗ್ಗೆ ಎಚ್ಚರ ವಹಿಸಬೇಕು. ಜಾಗೃತರಾಗಬೇಕೆಂದು ಮನವಿ ಮಾಡಿದರು.
ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರತಿಶ್ ಮಾತನಾಡಿ, ಕರಡಿಗೋಡು ಸಿದ್ದಾಪುರ ಗುಹ್ಯ ಗ್ರಾಮದಲ್ಲಿ ಕಾಡಾನೆಗಳ ಹಾವಳಿಯ ಹಿನ್ನೆಲೆಯಲ್ಲಿ ಶಾಸಕ ಪೊನ್ನಣ್ಣನವರು ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಅನುದಾನ ತಂದಿದ್ದು ಮುಂದಿನ ದಿನಗಳಲ್ಲಿ ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಬರಲು ಶಾಸಕರು ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.