ಸೋಮವಾರಪೇಟೆ, ಆ. ೨: ಸಮೀಪದ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರು ಅರಣ್ಯ ಇಲಾಖಾ ವಸತಿ ಗೃಹದ ಬಳಿ ನಿರ್ಮಿಸಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಪರಿಶೀಲಿಸಿದರು.
ಐಗೂರು ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ, ಅಂಗನವಾಡಿ ಹಾಗೂ ಜಲ ಜೀವನ್ ಮಿಷನ್ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ. ವಿನೋದ್ ಅವರು, ಐಗೂರು ಗ್ರಾಮದ ಕಾಜೂರು ಅರಣ್ಯ ವಸತಿ ಗೃಹದ ಮುಂಭಾಗದಲ್ಲಿ ನಿರ್ಮಿಸಲಾಗಿರುವ ೫೦,೦೦೦ ಲೀಟರ್ ಸಾಮರ್ಥ್ಯದ ಕಾಜೂರು, ಐಗೂರು ಗ್ರಾಮಕ್ಕೆ ನೀರು ಪೂರೈಸುವ ನೀರಿನ ಟ್ಯಾಂಕ್ ಹಾಗೂ ಯಡವಾರೆ ಗ್ರಾಮದಲ್ಲಿ ನಿರ್ಮಿಸಿರುವ ಟ್ಯಾಂಕ್ ಬಗ್ಗೆ ಗಮನ ಸೆಳೆದರು.
ಈ ಟ್ಯಾಂಕ್ ನಿರ್ಮಾಣವಾಗಿ ಎರಡು ವರ್ಷ ಕಳೆದರೂ, ಪೈಪ್‌ಲೈನ್ ಅಳವಡಿಕೆ ಮತ್ತು ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸ ಆಗಿಲ್ಲ ಎಂದು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಮುಂದಿನ ಎರಡು ತಿಂಗಳೊಳಗೆ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಪ್ರತಿ ಮನೆಗೂ ನೀರು ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಹೆಚ್ಚುವರಿ ಪೈಪ್‌ಲೈನ್‌ಗೆ ಬೇಡಿಕೆ ಸಲ್ಲಿಸಿದ್ದು, ಈ ಬಗ್ಗೆ ಕ್ರಮ ವಹಿಸಲಾಗುತ್ತಿದೆ. ಇದರೊಂದಿಗೆ ಲೋಕೋಪಯೋಗಿ ಇಲಾಖೆಗೆ ಒಳಪಟ್ಟ ರಸ್ತೆಯ ಬದಿಯಲ್ಲಿಯೂ ಪೈಪ್‌ಲೈನ್ ಅಳವಡಿಸಬೇಕಿದೆ. ವಿದ್ಯುತ್ ಸಂಪರ್ಕಕ್ಕೆ ಅನುಮೋದನೆ ಲಭಿಸಿದ್ದು, ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಅಭಿಯಂತರ ವೀರೇಂದ್ರ ತಿಳಿಸಿದರು.
ಈ ಸಂದರ್ಭದಲ್ಲಿ ಸೋಮವಾರ ಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್‌ಕುಮಾರ್, ಐಗೂರು ಗ್ರಾಮ ಪಂಚಾಯತ್ ಪಿಡಿಓ ಪೂರ್ಣಕುಮಾರ್ ಮತ್ತು ಅಭಿಯಂತರ ವೀರೇಂದ್ರ ಉಪಸ್ಥಿತರಿದ್ದರು.