ಸೋಮವಾರಪೇಟೆ, ಆ. ೧೪: ಬೇಳೂರು ಗ್ರಾಮ ಪಂಚಾಯಿತಿಯಲ್ಲಿ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎನ್ನಲಾಗಿದ್ದು, ಇದರ ವಿರುದ್ಧದ ಹೋರಾಟ ತೀವ್ರಗೊಳಿಸಲು ಬೇಳೂರು ವಲಯ ಕಾಂಗ್ರೆಸ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಬೇಳೂರು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬಜೆಗುಂಡಿ ಗ್ರಾಮದ ಸಮುದಾಯ ಭವನದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಪಿ. ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಸತೀಶ್, ಬೇಳೂರು ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಭ್ರಷ್ಟಾಚಾರ ಮಿತಿ ಮೀರಿದ್ದು ಜನ ಸಾಮಾನ್ಯರಿಗೆ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಇತ್ತೀಚೆಗೆ ೧೨.೫೦ ಲಕ್ಷ ರೂಪಾಯಿಗಳ ಹಗರಣ ಬೆಳಕಿಗೆ ಬಂದಿದೆ. ಸೂಕ್ತ ತನಿಖೆಗೆ ಒತ್ತಾಯಿಸಿ ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ನೀಡಲಾಗಿದೆ ಎಂದರು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಪಂಚಾಯಿತಿ ಆಡಳಿತ ವ್ಯವಸ್ಥೆಯ ವೈಫಲ್ಯಗಳು ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವ ಪಂಚಾಯಿತಿ ಆಡಳಿತ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಹಾಗೂ ರಾಜೀನಾಮೆಗೆ ಒತ್ತಾಯಿಸಿ "ಪಂಚಾಯಿತಿ ಚಲೋ ಪ್ರತಿಭಟನೆ" ಶೀಘ್ರವೇ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.

ಸಭೆಯಲ್ಲಿ ಕೆಪಿಸಿಸಿ ಸದಸ್ಯರಾದ ಕೆ.ಎ. ಯಾಕುಬ್, ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬಿ.ಇ. ಜಯೇಂದ್ರ, ಸೋಮವಾರಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆದಂ, ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ಬಸವರಾಜು, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿ ಆನಂದ್, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸುನಿಲ್, ವಕ್ತಾರ ಅಬ್ದುಲ್ ರಜಾಕ್, ಮಾಜಿ ಅಧ್ಯಕ್ಷರಾದ ಭಾಗ್ಯ ಮಂಜುನಾಥ್, ಸೋಮವಾರಪೇಟೆ ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ಮಂಜುಳಾ, ಬ್ಲಾಕ್ ಕಾಂಗ್ರೆಸ್ ಸದಸ್ಯರಾದ ಲಾರೆನ್ಸ್, ಬೂತ್ ಕಾಂಗ್ರೆಸ್ ಅಧ್ಯಕ್ಷರುಗಳಾದ ವಿಜಯ, ಸುರೇಂದ್ರ, ಪ್ರಕಾಶ್, ಕಾಂಗ್ರೆಸ್ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.