ಚೆಟ್ಟಳ್ಳಿ, ಆ. ೧೬: ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಯೂನಿಯನ್ ಬ್ಯಾಂಕ್ ಬ್ಯಾಂಕ್ ವಾಲ್ನೂರು ಇವರ ಸಹಯೋಗದೊಂದಿಗೆ ಕುಶಾಲನಗರ ತಾಲೂಕಿನ ವಾಲ್ನೂರು ಗ್ರಾಮದಲ್ಲಿ, ವಾಲ್ನೂರು ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ್ ನಾಯಕ್ ಅವರು ಮಾತನಾಡಿ, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ನಬಾರ್ಡ್ನ ಆರ್ಥಿಕ ನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲೂಕುಗಳಲ್ಲಿ ಮಾಡುತ್ತಿದ್ದು ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್‌ಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದು ಆರ್ಥಿಕ ಸಮಾಲೋಚಕರಾದ ನಬಿ ತಿಳಿಸಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮನು ಮಹೇಶ್ ಮಾತನಾಡಿ, ಇದು ಉಪಯುಕ್ತವಾದ ಕಾರ್ಯಕ್ರಮವಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇದಪ್ಪ ಮಾತನಾಡಿ, ಯೋಜನೆ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳ, ರಿಸರ್ವ್ ಬ್ಯಾಂಕಿನ ಅಧಿಕಾರಿ ಅಲೋಕ್ ಸೀನ್ಹ ಮತ್ತು ಯೂನಿಯನ್ ಬ್ಯಾಂಕ್ ಶಾಖೆಯ ವ್ಯವಸ್ಥಾಪಕಿ ಪಬಿತ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಗ್ರಾಹಕರು ಉಪಸ್ಥಿತರಿದ್ದರು.

ಹರೀಶ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು