ಮಡಿಕೇರಿ, ಆ. ೨೧ : ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಉಳುವವನೇ ಭೂಮಿಯ ಒಡೆಯ, ಜೀತಪದ್ಧತಿ ನಿರ್ಮೂಲನೆ, ವಿದ್ಯಾರ್ಥಿ ನಿಲಯ ಸ್ಥಾಪನೆ, ಹಿಂದುಳಿದ ವರ್ಗಗಳಿಗೆ ನ್ಯಾಯ, ಎಲೆಕ್ಟಾçನಿಕ್ ಸಿಟಿ ಆರಂಭ ಹೀಗೆ ಮಹತ್ವದ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ತುಂಬಾ ದೂರದೃಷ್ಟಿಯಿಂದ ಆಡಳಿತವನ್ನು ನಡೆಸಿ, ಇಂದಿಗೂ ಸಹ ಜನಮನ್ನಣೆ ಉಳಿಸಿಕೊಂಡಿರುವುದು ಸಾಕ್ಷಿ ಪ್ರಜ್ಞೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ ೧೧೦ ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯದಲ್ಲಿ ಪ್ರತಿಯೊಂದು ಸಮಾಜಕ್ಕೂ ಸಾಮಾಜಿಕ ನ್ಯಾಯ ಕಲ್ಪಿಸಲು ಸಾಕಷ್ಟು ಶ್ರಮಿಸಿದ್ದಾರೆ. ಇಂತಹ ಮಹನೀಯರ ಆದರ್ಶ ಮತ್ತು ಸಾಧನೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು.
ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಕೆ.ಸಿ.ದಯಾನಂದ ಅವರು ಮಾತನಾಡಿ, ಡಿ.ದೇವರಾಜ ಅರಸು ಅವರು ಸಾಮಾಜಿಕ ಸುಧಾರಣೆಯ ಮತ್ತು ಹಿಂದುಳಿದ ವರ್ಗಗಳ ಹರಿಕಾರ ಎಂದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಕೇಶವ ಕಾಮತ್ ಅವರು ಮಾತನಾಡಿ, ಡಿ.ದೇವರಾಜ ಅರಸು ಅವರು ಸಮಾಜ ಮುಖಿಯಾಗಿ ಕೆಲಸ ಮಾಡಿ ಶ್ರಮಿಸಿದ್ದಾರೆ ಎಂದು ನುಡಿದರು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಪಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ಸದ್ಭಾವನಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರಾದ ಕವಿತಾ ಅವರು ಬೋಧಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ತಹಶೀಲ್ದಾರ್ ಶ್ರೀಧರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದೀಪಕ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ವ್ಯವಸ್ಥಾಪಕರಾದ ಶಿವಶಂಕರ, ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿ ಮೋಹನ್ ಕುಮಾರ್ ಹಾಗೂ ಇತರರು ಇದ್ದರು. ಕೆ.ಆರ್. ಭಾರತಿ ನಿರೂಪಿಸಿ, ಶ್ರೀಕಾಂತ್ ವಂದಿಸಿದರು.