ಸಿದ್ದಾಪುರ ಆ. ೨೩: ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಮ್ಮೇಳನವು ನೆಲ್ಲಿಹುದಿಕೇರಿ ಗ್ರಾಮದ ಅಭ್ಯತ್ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸಿದ್ದಾಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಎಂ .ಎ. ಯಮುನಾ ಉದ್ಘಾಟಿಸಿ ಮಾತನಾಡಿ, ದೇಶದಾದ್ಯಂತ ಮಹಿಳೆಯರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮಹಿಳಾ ಕಾರ್ಮಿಕರಿಗೆ ಸೂಕ್ತ ರೀತಿಯಲ್ಲಿ ವೇತನ ಲಭಿಸುತ್ತಿಲ್ಲ ಮಹಿಳೆಯರ ಮೇಲೆ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿದ್ದು ಈ ಬಗ್ಗೆ ಸರಕಾರಗಳು ಕೂಡ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಮಾನಸಿಕ ಹಿಂಸೆಗಳು ಕೂಡ ಅನುಭವಿಸುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ವಿಷಾದನೀಯ ಎಂದರು. ಇತ್ತೀಚಿನ ದಿನಗಳಲ್ಲಿ ಮಹಿಳಾ ಕಾರ್ಮಿಕರ ಮೇಲೆ ಕಾಡಾನೆಗಳು ದಾಳಿ ನಡೆಸುತ್ತಿದ್ದು ಮಹಿಳೆಯರು ಭಯದ ವಾತಾವರಣದಲ್ಲಿ ತೋಟಗಳಲ್ಲಿ ಕೆಲಸ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಜಿಲ್ಲಾ ಬಿಸಿಊಟ ನೌಕರರ ಸಂಘದ ಪ್ರಮುಖರಾದ ಕುಸುಮ ಹಾಗೂ ಆದಿವಾಸಿ ಸಂಘಟನೆಯ ಪ್ರಮುಖರಾದ ಪ್ರೇಮ ಹಾಗೂ ಡಿ.ವೈ.ಎಫ್.ಐ. ಸಂಘಟನೆ ಜಿಲ್ಲಾಧ್ಯಕ್ಷ ಭರತ್ ಕಾರ್ಯದರ್ಶಿ ಜ್ಯೋತಿ ಕೃಷ್ಣ ಮಾತನಾಡಿದರು. ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಪದ್ಮಿನಿ ಶ್ರೀಧರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇದೇ ಸಮ್ಮೇಳನದಲ್ಲಿ ಮೂರು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರುಗಳನ್ನು ನೇಮಕ ಮಾಡಬೇಕು. ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದರು.
ತೋಟಗಳಲ್ಲಿ ಕೆಲಸ ಮಾಡುವ ಮಹಿಳೆಯರ ಮೇಲೆ ಕಾಡಾನೆಗಳು ದಾಳಿಗಳು ನಡೆಯದಂತೆ ಶಾಶ್ವತ ಯೋಜನೆಯನ್ನು ರೂಪಿಸಿ ಕಾಡಾನೆ ಹಾವಳಿಯನ್ನು ತಡೆಗಟ್ಟಬೇಕು ಮತ್ತು ಬಡ ಮಹಿಳೆಯರಿಗೆ ಶಾಶ್ವತ ಸೂರು ಕಲ್ಪಿಸಿಕೊಡಬೇಕೆಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ತೋಟ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಎನ್.ಡಿ. ಕುಟ್ಟಪ್ಪನ್ ಹಾಜರಿದ್ದರು.