ವೀರಾಜಪೇಟೆ, ಸೆ. ೧೨: ಅಪರಾಧ ಮುಕ್ತ ಸಮಾಜವನ್ನು ನಿರ್ಮಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು ಪ್ರತಿಯೊಬ್ಬರು ಕಾನೂನಿನ ನಿಯಮಗಳನ್ನು ಪಾಲಿಸುವುದರ ಜೊತೆಗೆ ಅಪರಾಧ ಮುಕ್ತ ಸಮಾಜವನ್ನು ನಿರ್ಮಿಸಲು ಬದ್ಧರಾಗಿ ಎಂದು ವೀರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಕರೆ ನೀಡಿದರು.
ವೀರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ವೀರಾಜಪೇಟೆ ಪೊಲೀಸ್ ಠಾಣೆ ಹಾಗೂ ಪದವಿ ಕಾಲೇಜಿನ ಐಕ್ಯೂಎಸಿ, ಎನ್‌ಎಸ್‌ಎಸ್, ಯುವ ರೆಡ್‌ಕ್ರಾಸ್ ಘಟಕದ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂಚಾರಿ ನಿಯಮಗಳು ಹಾಗೂ ಮಾದಕ ವಸ್ತು ಸೇವನೆಯ ಪರಿಣಾಮಗಳು, ಕಾಯಿದೆಗಳ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸವನ್ನು ನೀಡುತ್ತಾ ಮಾತನಾಡುತಿದ್ದರು.
ಮಾದಕ ವಸ್ತುಗಳು ಮನುಷ್ಯನ ಜೀವನವನ್ನು ಹಾಳು ಮಾಡಿಬಿಡುತ್ತವೆ. ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆಯ ದಾಸರಾಗದೇ ಭವ್ಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ವೀರಾಜಪೇಟೆ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳಾದ ಪ್ರಮೋದ್ ಮಾತನಾಡಿ, ಕಾನೂನು ಸುವ್ಯವಸ್ಥೆಗೆ ಎಲ್ಲರೂ ಬದ್ಧರಾಗಿರಬೇಕು. ವಿದ್ಯಾರ್ಥಿ ಹಂತದಿAದಲೇ ಉತ್ತಮ ವ್ಯಕ್ತಿತ್ವವನ್ನು ಪ್ರತಿಯೊಬ್ಬರು ರೂಪಿಸಿಕೊಳ್ಳಬೇಕು. ಜೊತೆಗೆ ಕಾನೂನಿನ ಪಾಠವನ್ನು ಸಮಾಜಕ್ಕೆ ತಿಳಿಹೇಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮುಖ್ಯ. ಸಂವಿಧಾನವನ್ನು ಅರಿಯಬೇಕು. ಕಾನೂನಿನ ಅರಿವಾದಲ್ಲಿ ಅಪರಾಧಗಳು ನಡೆಯಲು ಸಾಧ್ಯವಿಲ್ಲ ಎಂದರು. ವೇದಿಕೆಯಲ್ಲಿ ವೀರಾಜಪೇಟೆ ಗ್ರಾಮಾಂತರ ಠಾಣೆಯ ಠಾಣಾಧಿಕಾರಿಗಳಾದ ಲತಾ, ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ, ಎನ್‌ಎಸ್‌ಎಸ್ ಅಧಿಕಾರಿ ಬಿ.ಎನ್. ಶಾಂತಿಭೂಷಣ್, ಯುವ ರೆಡ್‌ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೇಸ್ ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಪ್ರತಿಮಾ ರೈ ಸ್ವಾಗತಿಸಿ, ಎನ್‌ಎಸ್‌ಎಸ್ ಅಧಿಕಾರಿ ಶಾಂತಿಭೂಷಣ್ ನಿರೂಪಿಸಿ, ಉಪನ್ಯಾಸಕಿ ವಿಲೀನ ವಂದಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು, ಪೊಲೀಸ್ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.