ಕೂಡಿಗೆ, ಸೆ. ೨೩: ಮಕ್ಕಳು ಉತ್ತಮ ಶಿಕ್ಷಣ ಪಡೆದು ವಿದ್ಯಾವಂತರಾದರೆ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ನಿವೃತ್ತ ಹಿರಿಯ ಅಧಿಕಾರಿಯೂ ಆದ ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯೆ ಸೂದನ ರತ್ನಾವತಿ ಹೇಳಿದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಡಿಎಂಸಿ ಸಹಯೋಗದೊಂದಿಗೆ ಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ನೋಟ್‌ಬುಕ್, ಲೇಖನ ಸಾಮಗ್ರಿ ವಿತರಣಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸ್ವತಃ ಲೇಖನ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದರು. ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಮುಂದಾಗಬೇಕು. ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿರುವ ಉತ್ತಮ ಗುಣಮಟ್ಟದ ಶಿಕ್ಷಣದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹಾಗೂ ಎಸ್‌ಎಸ್‌ಎಲ್ಸಿ ಪರೀಕ್ಷಾ ಫಲಿತಾಂಶ ಹೆಚ್ಚಾಗಿದೆ. ಸಾರ್ವಜನಿಕವಾಗಿಯೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳು ಕೊಡುಗೆ ನೀಡುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಕಳೆದ ಹಲವು ವರ್ಷಗಳಿಂದ ಉಚಿತ ನೋಟ್‌ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನು ನೀಡುತ್ತಿರುವ ದಾನಿಗಳಾದ ಸೂದನ ರತ್ನಾವತಿ ಅವರ ಸೇವಾ ಕಾರ್ಯ ಪ್ರಶಂಸನೀಯವಾದುದು. ದಾನಿಗಳು ಸರ್ಕಾರಿ ಶಾಲೆಗಳ ಮಕ್ಕಳ ಶೈಕ್ಷಣಿಕ ಕಲಿಕೆಗೆ ಪ್ರೋತ್ಸಾಹ ನೀಡಿದರೆ ಸರ್ಕಾರಿ ಶಾಲೆಗಳ ಅಭಿವೃದ್ಧಿ ಕೂಡ ಸಾಧ್ಯ ಎಂದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್, ಶಾಲೆಯ ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಬಿ.ಎನ್. ಸುಜಾತ, ಬಿ.ಡಿ. ರಮ್ಯ, ಎಸ್.ಎಂ. ಗೀತಾ, ಬಿ.ಎಸ್. ಅನ್ಸಿಲಾ ರೇಖಾ, ಕೆ.ಟಿ. ಸೌಮ್ಯ, ಸಿಬ್ಬಂದಿ ಎಂ. ಉಷಾ, ವಿದ್ಯಾರ್ಥಿಗಳು ಇದ್ದರು. ಇದೇ ವೇಳೆ ದಾನಿ ಸೂದನ ರತ್ನಾವತಿ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರ ಹುದ್ದೆಯಿಂದ ಕೂಡಿಗೆ ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕಿಯಾಗಿ ಮುಂಬಡ್ತಿ ಹೊಂದಿರುವ ಬಿ.ಎನ್. ಪುಷ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.