ಸೋಮವಾರಪೇಟೆ, ಸೆ. ೨೯: ತಾಲೂಕಿನ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹುತಾತ್ಮ ಯೋಧ ದಿವಿನ್ ಅವರ ಹೆಸರು ನಾಮಕರಣ ಮಾಡಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಆರೋಗ್ಯ ಇಲಾಖಾ ಸಚಿವರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮನವಿ ಮಾಡಿದರು.

ಕಾರ್ಯಕ್ರಮ ನಿಮಿತ್ತ ಜಿಲ್ಲೆಗೆ ಆಗಮಿಸಿದ್ದ ಸಚಿವರು ಹಿಂತೆರಳುವ ಸಂದರ್ಭ ಆಲೂರು ಸಿದ್ದಾಪುರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಈ ಸಂದರ್ಭ ಜೊತೆಗಿದ್ದ ಶಾಸಕ ಡಾ. ಮಂತರ್ ಗೌಡ ಅವರು ಮಾತನಾಡಿ, ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸೇನಾ ವಾಹನ ಅವಘಡಕ್ಕೆ ಒಳಗಾಗಿ ಹುತಾತ್ಮರಾದ ಭಾರತೀಯ ಸೇನೆಯ ಯೋಧ, ಆಲೂರುಸಿದ್ದಾಪುರ ಗ್ರಾಮದ ಪಳಂಗೋಟು ದಿವಿನ್ ಅವರ ಸ್ಮರಣಾರ್ಥ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿವಿನ್ ಅವರ ಹೆಸರು ನಾಮಕರಣ ಮಾಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಮುಂದಿನ ದಿನಗಳಲ್ಲಿ ಈ ಬಗ್ಗೆ ಗಮನಹರಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಸೇರಿದಂತೆ ಪಕ್ಷದ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.