ಚೆಯ್ಯಂಡಾಣೆ, ಸೆ. ೨೯: ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಕರ್ನಾಟಕ ಬ್ಯಾಂಕ್ ಚೆಯ್ಯಂಡಾಣೆ ಶಾಖೆ ಇವರ ಸಹಯೋಗದೊಂದಿಗೆ ಚೆಯ್ಯಂಡಾಣೆಯಲ್ಲಿ ನರಿಯಂದಡ ಪಂಚಾಯಿತಿಯ ಸಹಕಾರದೊಂದಿಗೆ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ನರಿಯಂದಡ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ನರಿಯಂದಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಉದ್ಘಾಟಿಸಿ ಮಾತನಾಡಿ ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು.
ಕರ್ನಾಟಕ ಬ್ಯಾಂಕ್ ಚೆಯ್ಯಂಡಾಣೆ ಶಾಖೆಯ ವ್ಯವಸ್ಥಾಪಕರಾದ ಬಾಲಕೃಷ್ಣ ಮಾತನಾಡಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭೀಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು ವಾರ್ಷಿಕ ೨೦ ರೂ.ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ ೨ ಲಕ್ಷಗಳ ವರೆಗಿನ ವಿಮಾ ಮೊತ್ತವು ಗ್ರಾಹಕರ ನಾಮಿನಿಯವರಿಗೆ ಸಿಗುವುದಾಗಿ ಮಾಹಿತಿ ನೀಡಿದರು.
ಅವಾರ್ಡ್ ಸಂಸ್ಥೆಯ ಮಡಿಕೇರಿ ತಾಲೂಕು ಸಂಯೋಜಕಿ ಅಂಬಿಕಾ ಬಿ.ಎ. ಮಾತನಾಡಿ ೬೦ವರ್ಷ ಕಳೆದ ನಂತರ ಪಿಂಚಣಿ ರೂಪದಲ್ಲಿ ೧ಸಾವಿರ ರೂ ಗಳಿಂದ ೫ ಸಾವಿರ ರೂಗಳ ವರೆಗಿನ ಪಿಂಚಣಿ ಹಣ ಸಿಗಬೇಕಾದರೆ ಈಗಾಗಲೇ ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸುವಂತೆ ತಿಳಿಸಿದರು,
ನಂತರದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ನಬಾರ್ಡ್ನ ಆರ್ಥಿಕ ನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಎನ್ನುವ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲೂಕುಗಳಲ್ಲಿ ಮಾಡುತ್ತಿದ್ದು ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು, ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್‌ಗಳ ಬಗ್ಗೆ ಮಾಹಿತಿ ನೀಡುವುದಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಮಾತನಾಡಿ ಈ ಒಂದು ಕಾರ್ಯಕ್ರಮವು ಅತ್ಯಂತ ಉಪಯುಕ್ತವಾದ ಕಾರ್ಯಕ್ರಮವಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭ ನರಿಯಂದಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಮತ್ತಿತರರು ಉಪಸ್ಥಿತರಿದ್ದರು.