ಸೋಮವಾರಪೇಟೆ,ಸೆ.೨೯: ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವವನ್ನು ಉಳಿಸಿದ ಸಾರ್ಥಕತೆ ಲಭಿಸುತ್ತದೆ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ವತಿಯಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಕ್ತ ದಾನದ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆಯಿಂದಾಗಿ ಸಾಕಷ್ಟು ಜನರು ರಕ್ತದಾನಕ್ಕೆ ಮುಂದಾಗುತ್ತಿಲ್ಲ. ಮೂರು ತಿಂಗಳಿಗೊಮ್ಮೆ ರಕ್ತ ನೀಡುವುದರಿಂದ ನಮ್ಮ ಆರೋಗ್ಯವನ್ನು ಸುಧಾರಿಸಿ ಕೊಳ್ಳಬಹುದು. ದೇಹದಲ್ಲಿ ಹೊಸ ರಕ್ತ ಉತ್ಪಾದನೆಗೆ ಅವಕಾಶವಾಗುವುದು. ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿಯಿಂದ ಹತ್ತು ಹಲವು ಮೊದಲನೇ ಪುಟದಿಂದ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅದರಲ್ಲಿ ಜನಸಾಮಾನ್ಯರ ಆರೋಗ್ಯ ತಪಾಸಣೆ ಮತ್ತು ರಕ್ತದಾನಕ್ಕೂ ಆದ್ಯತೆ ನೀಡಲಾಗಿದೆ.ಇಂತಹ ಶಿಬಿರಗಳಲ್ಲಿ ನುರಿತ ತಜ್ಞ ವೈದ್ಯರು ಭಾಗಿಯಾಗಲಿದ್ದು, ಜನರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಎಸ್.ಸಿ. ಮೋರ್ಚಾ ಅಧ್ಯಕ್ಷ ರಾಮಕೃಷ್ಣ ವಹಿಸಿದ್ದರು. ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಜಮೀರ್, ಮಡಿಕೇರಿ ರಕ್ತ ನಿಧಿ ಘಟಕದ ಮುಖ್ಯಸ್ಥ ಡಾ. ಕರುಂಬಯ್ಯ, ಸೋಮವಾರಪೇಟೆ ಮಂಡಲ ಅಧ್ಯಕ್ಷ ಗೌತಮ್ ಇದ್ದರು.