ಪೊನ್ನಂಪೇಟೆ, ಸೆ. ೩೦: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು.
ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿಯ ಗೌ. ಕಾರ್ಯದರ್ಶಿ ಕೆ.ಪಿ. ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ, ವೀರಾಜಪೇಟೆ ವಿಭಾಗದ ಡಿ.ವೈ.ಎಸ್.ಪಿ. ಮಹೇಶ್ ಕುಮಾರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಕಾಲೇಜು ಹಂತ ಒಂದು ಪ್ರಮುಖ ಮೆಟ್ಟಿಲು ಎಂದರು.
ಮತ್ತೊಬ್ಬ ಮುಖ್ಯ ಅತಿಥಿ ಗೋಣಿಕೊಪ್ಪಲು ವೃತ್ತ ನಿರೀಕ್ಷಕಶಿವರಾಜ್ ಅರ್. ಮುಧೋಳ್ ಅವರು ಮಾತನಾಡಿ ಹಿಂದಿನ ಕಾಲದಲ್ಲಿ ಮಕ್ಕಳಿಗೆ ತಂದೆ ತಾಯಿ, ಶಿಕ್ಷಕರು ಹೊಡೆದು ಬುದ್ದಿ ಕಲಿಸುತ್ತಿದ್ದರು. ಈಗ ಅಂತಹ ಸಂಪ್ರದಾಯ ಮರೆಯಾಗಿದೆ. ಯುವ ಜನಾಂಗ ಹಾದಿ ತಪ್ಪುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಈ ಸಂದರ್ಭ ವಿದ್ಯಾರ್ಥಿ ನಾಯಕರಿಗೆ ಬ್ಯಾಡ್ಜ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಗೋಣಿಕೊಪ್ಪಲು ಠಾಣಾಧಿಕಾರಿ ಪ್ರದೀಪ್ ಕುಮಾರ್, ಕಾವೇರಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಡಾ. ಪಿ. ಪಿ. ಸವಿತ, ಕೆ. ಕೆ. ಚಿತ್ರಾವತಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಉಪನ್ಯಾಸಕರು, ತರಗತಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.