ಸೋಮವಾರಪೇಟೆ, ಸೆ. ೩೦: ಪದ್ಮಭೂಷಣ, ಸರಸ್ವತಿ ಸಮ್ಮಾನ್ ಬಿರುದಾಂಕಿತ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಸೋಮವಾರಪೇಟೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶ್ರದ್ಧಾಂಜಲಿ ಸಭೆ ಹಾಗೂ ನುಡಿನಮನ ಕಾರ್ಯಕ್ರಮ ನಡೆಯಿತು.
ಇಲ್ಲಿನ ಸಾಹಿತ್ಯ ಭವನದಲ್ಲಿ ನಡೆದ ಭೈರಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ, ಭೈರಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ಅಧ್ಯಕ್ಷ ಜೆ.ಸಿ. ಶೇಖರ್, ಅಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರಾದ ಎಸ್.ಎಲ್. ಭೈರಪ್ಪ ಅವರ ಕಾದಂಬರಿಗಳು ಮೇಲುಕೃತಿಗಳಾಗಿವೆ.
ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಇತರೆ ಭಾಷೆಗಳಿಗೆ ಅನುವಾದಗೊಂಡಿರುವುದು ಕನ್ನಡ ಭಾಷೆಗೆ ಸಿಕ್ಕ ಗೌರವವಾಗಿದೆ ಎಂದು ಅಭಿಪ್ರಾಯಿಸಿದರು.
ಇವರ ಹಲವಾರು ಕಾದಂಬರಿಗಳು ಮರು ಮುದ್ರಣಗೊಂಡು ಜನಪ್ರಿಯ ಬರಹಗಾರರಾಗಿ ಗುರುತಿಸಿಕೊಂಡಿದ್ದರು.
೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಹೇಳಿದರು. ಪರಿಷತ್ನ ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ಅವರು ಭೈರಪ್ಪ ಅವರ ಬಾಲ್ಯ, ಶೈಕ್ಷಣಿಕ ಸಾಧನೆ, ಕಾದಂಬರಿಗಳ ಬಗ್ಗೆ ಮಾತನಾಡಿದರು.
ಪರಿಷತ್ನ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್, ಪದಾಧಿಕಾರಿಗಳಾದ ಎ.ಪಿ. ವೀರರಾಜು, ಕೆ.ಪಿ. ದಿನೇಶ್, ಬಿ.ಇ. ಜಯೇಂದ್ರ, ಕಾಟ್ನಮನೆ ಗಿರೀಶ್ ಇದ್ದರು.