ಕೂಡಿಗೆ, ಅ. ೪: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಯೂನಿಯನ್ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಆಂದೋಲನ ಕಾರ್ಯಕ್ರಮ ನಡೆಯಿತು

ಜಿಲ್ಲಾ ಲೀಡ್ ಬ್ಯಾಂಕ್, ಸಹಯೋಗದೊಂದಿಗೆ ಕೂಡು ಮಂಗಳೂರು ಗ್ರಾಮದಲ್ಲಿ, ಕೇಂದ್ರ ಸರಕಾರದ ಆದೇಶದಂತೆ ಆಯಾ ಗ್ರಾಮದ ಬ್ಯಾಂಕ್ ಶಾಖೆ ಮುಖಾಂತರ ಪ್ರತೀವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ಯೂನಿಯನ್ ಬ್ಯಾಂಕ್‌ನ ಸಹಾಯಕ ವ್ಯವಸ್ಥಾಪಕ ವೆಂಕಟರಮಣ ಮಾತನಾಡಿ, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಆರ್ಥಿಕ ಸಮಾಲೋಚಕರಾದ ನಬಿ ಮಾತನಾಡಿ, ಪ್ರತಿಯೊಬ್ಬರು ಕೆ.ವೈ.ಸಿ. ಕಡ್ಡಾಯವಾಗಿ ಮಾಡಿಸುವಂತೆ ತಿಳಿಸಿದರು. ಎಲ್ಲರೂ ನಿಮ್ಮ ಖಾತೆ ಇರುವ ಬ್ಯಾಂಕ್ ಗಳಿಗೆ ತೆರಳಿ ತಮ್ಮ ಗುರುತಿನ ಚೀಟಿ ಆಧಾರ್ ಕಾರ್ಡನ್ನು ನೀಡಿ ಮರು ಕೆವೈಸಿ ಮಾಡಿಸುವಂತೆ ಗ್ರಾಹಕರಿಗೆ ಸಲಹೆ ನೀಡಿದರು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ನಬಾರ್ಡ್ನ ಆರ್ಥಿಕ ನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲೂಕುಗಳಲ್ಲಿ ಮಾಡುತ್ತಿದ್ದು ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್‌ಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದು ಆರ್ಥಿಕ ಸಮಾಲೋಚಕ ಹರೀಶ್ ಸಿ.ಜಿ. ಅವರು ತಿಳಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಫಿಲೋಮಿನಾ ಮಾತನಾಡಿದರು. ಹರೀಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.