ಮಡಿಕೇರಿ, ಅ. ೮ : ರಾಜ್ಯಾದ್ಯಂತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಚುನಾವಣೆಯಲ್ಲಿ ಮತಗಳ್ಳತನದ ಬಗ್ಗೆ ಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದು ಕೊಡಗಿನಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರ ಸಹಿ ಸಂಗ್ರಹಿಸುವ ಗುರಿ ಹೊಂದಿರುವುದಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜಾ ಉತ್ತಪ್ಪ ತಿಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಮತಗಳ್ಳತನವಾಗಿರುವ ಬಗ್ಗೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಾಕ್ಷö್ಯಗಳೊಂದಿಗೆ ಬಹಿರಂಗಪಡಿಸಿದ್ದು, ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂವಿಧಾನಬದ್ಧ ಹೋರಾಟವನ್ನು ಕಾಂಗ್ರೆಸ್ ಪಕ್ಷ ನಡೆಸಲಿದೆ ಎಂದು ಅವರು ತಿಳಿಸಿದ್ದಾರೆ.

ಮುಂದಿನ ಸೋಮವಾರ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಮತಗಳ್ಳತನ ಜಾಗೃತಿ ಆಂದೋಲನ ಆರಂಭಗೊAಡು ಜಿಲ್ಲೆಯ ಎಲ್ಲಾ ಬ್ಲಾಕ್ ವ್ಯಾಪ್ತಿಯಲ್ಲಿ ನಡೆಯಲಿದ್ದು, ಬ್ಲಾಕ್ ಕಾಂಗ್ರೆಸ್ ಮತ್ತು ವಲಯ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂದು ಧರ್ಮಜಾ ಉತ್ತಪ್ಪ ತಿಳಿಸಿದ್ದಾರೆ.

ಈ ಬಗ್ಗೆ ನಡೆದ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೊಲ್ಯದ ಗಿರೀಶ್, ಮುನೀರ್ ಅಹಮ್ಮದ್, ಮುಖಂಡರಾದ ಟಿ.ಪಿ. ರಮೇಶ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ. ಶಶಿಧರ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷರಾದ ಸತೀಶ್, ನಾಪೋಕ್ಲು ಬ್ಲಾಕ್ ಅಧ್ಯಕ್ಷರಾದ ಇಸ್ಮಾಯಿಲ್, ವೀರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ ಸಭೆಯಲ್ಲಿ ಉಪಸ್ಥಿತರಿದ್ದರು.