ಗೋಣಿಕೊಪ್ಪಲು, ಅ. ೨೫ : ೧೦೦ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪೊನ್ನಂಪೇಟೆಯಲ್ಲಿ ನಿರ್ಮಾಣವಾಗಲಿರುವ ೫ ಕೋಟಿ ವೆಚ್ಚದ ಕ್ರೀಡಾ ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.

ಚುನಾವಣಾ ಪೂರ್ವದಲ್ಲಿ ನೂತನ ವಸತಿ ಶಾಲೆಗೆ ಅಗತ್ಯವಿರುವ ಕಟ್ಟಡ ನಿರ್ಮಾಣದ ಬಗ್ಗೆ ಭರವಸೆ ನೀಡಿದ್ದ ಪೊನ್ನಣ್ಣ ಈ ಬಾರಿಯ ಬಜೆಟ್‌ನಲ್ಲಿ ೫ ಕೋಟಿ ಅನುದಾನವನ್ನು ಮೀಸಲಿಡುವಂತೆ ಮಾಡಿದ್ದು, ಇದೀಗ ಬಹು ನಿರೀಕ್ಷಿತ ಯೋಜನೆಯಾದ ವಸತಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಹಸಿರು ನಿಶಾನೆ ದೊರಕಿದೆ.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪೊನ್ನಂಪೇಟೆ ಕ್ರೀಡಾಂಗಣದಲ್ಲಿ ನೂತನ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಕ್ರೀಡಾ ವಸತಿ ನಿಲಯ ಕಟ್ಟಡ ನಿರ್ಮಾಣದ ಕಾಮಗಾರಿಯ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಪೊನ್ನಣ್ಣ ಕೊಡಗು ಜಿಲ್ಲೆಯು ಕ್ರೀಡೆಗೆ ಹೆಸರುವಾಸಿಯಾಗಿದೆ. ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಕ್ರೀಡಾ ವಸತಿ ಶಾಲೆ ಹಾಗೂ ಟರ್ಫ್ ಮೈದಾನ ನಿರ್ಮಾಣಗೊಂಡಿದೆ. ಪ್ರಸ್ತುತ ಕ್ರೀಡಾ ವಸತಿ ಶಾಲೆಯಲ್ಲಿ ೬೭ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಮುಂದಿನ ಅವಧಿಯಲ್ಲಿ ೧೦೦ ಮಕ್ಕಳಿಗೆ ಅವಕಾಶ ಲಭಿಸಲಿದೆ. ಈ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿ ಅಭ್ಯಾಸ ಮಾಡುವ ಅವಕಾಶ ಹೆಚ್ಚಾಗಿ ಸಿಗಲಿದೆ. ಪ್ರಸ್ತುತ ಇರುವ ಟರ್ಫ್ ಮೈದಾನದ ದುರಸ್ಥಿ ಕಾರ್ಯಕ್ಕೆ ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ೩.೨೦ ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಆದಷ್ಟು ಬೇಗನೆ ಈ ಕಾಮಗಾರಿಗೆ ಭೂಮಿಪೂಜೆ ಕಾರ್ಯ ನಡೆಯಲಿದೆ.

ನೂತನ ವಸತಿ ಶಾಲೆಯ ಕಟ್ಟಡ ಕಾಮಗಾರಿ ಕೈಗೆತ್ತಿಕೊಂಡಿರುವ ಗುತ್ತಿಗೆದಾರರು ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ರೀತಿಯಲ್ಲಿ ಕಲಿಕೆಗೆ ಬೇಕಾದ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ನೂತನ ವಸತಿ ಶಾಲೆಯಿಂದ ಪ್ರಸ್ತುತ ಇರುವ ಕಾಲೇಜು ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಅನುಕೂಲ ಕಲ್ಪಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕಿ ನಿರ್ದೇಶಕಿ ವಿಸ್ಮಯಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಇಂಜಿನಿಯರ್ ಜಯಪ್ರಕಾಶ್, ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಮೋಹನ್ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮೂಕಳೇರ ಕುಶಾಲಪ್ಪ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಸದಸ್ಯರಾದ ಕೋಳೆರ ಭಾರತಿ, ಮೂಕಳೇರ ಸುಮಿತಾ ಗಣೇಶ್, ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಲಾಲಾ ಅಪ್ಪಣ್ಣ, ಸ್ಥಳೀಯ ಪ್ರಮುಖರಾದ ಎರ್ಮು ಹಾಜಿ, ನೂರೆರ ಧನ್ಯ ರವೀಂದ್ರ, ಶಾಜಿ ಅಚ್ಚುತ್ತನ್, ಮತ್ರಂಡ ದಿಲ್ಲು, ಕಾಕೆರ ರವಿ, ಸೇರಿದಂತೆ ಅನೇಕ ಪ್ರಮುಖರು ಪಾಲ್ಗೊಂಡಿದ್ದರು.