ಮಡಿಕೇರಿ, ಅ. ೨೮: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕೊಡಗು ಜಿಲ್ಲೆಯಲ್ಲಿ ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳ ಕಾರ್ಯಚಟುವಟಿಕೆಗಳನ್ನು ಗುರುತಿಸಿ ಈ ಸಂದರ್ಭ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಸ್ಥೆಗಳ ಪರವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರೂ ಆದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಯೋಜಕ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಹಾಗೂ ಹ್ಯೂಮನ್ ವರ್ಲ್ಡ್ ಫಾರ್ ಅನಿಮಲ್ಸ್ನ ತಿತಿಮತಿಯಲ್ಲಿ ವನ್ಯಜೀವಿಗಳು ಮತ್ತು ಮಾನವ ಸಂಘರ್ಷದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ ಪ್ರಾಜೆಕ್ಟ್ ವ್ಯವಸ್ಥಾಪಕ ವಿನೋದ್ ಅವರನ್ನು ಮಾಲಿನ್ಯ ಮಂಡಳಿಯ ವತಿಯಿಂದ ರಾಜ್ಯ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸನ್ಮಾನಿಸಿ ಪ್ರಶಸ್ತಿ ನೀಡಿ ಗೌರವಿಸಿದರು.

ದೇಶಮಟ್ಟದಲ್ಲಿ ಮತ್ತು ರಾಜ್ಯಮಟ್ಟದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ೧೯೭೪ ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾAಧಿ ಅವರು ಸ್ಥಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಉತ್ತಮ ಪರಿಸರ ಚಟುವಟಿಕೆಗಳನ್ನು ಕೈಗೊಂಡಿರುವ ಸೇವಾ ಸಂಸ್ಥೆಗಳ ಸೇವೆಯನ್ನು ಪರಿಗಣಿಸಿ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ, ಶಾಸಕರಾದ ಜಿ.ಟಿ. ದೇವೇಗೌಡ, ಹರೀಶ್, ಮಂಡಳಿಯ ಸದಸ್ಯ ಕಾರ್ಯದರ್ಶಿ ಲಿಂಗರಾಜು, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ, ಮಾಲಿನ್ಯ ಮಂಡಳಿಯ ಕೊಡಗು ಜಿಲ್ಲಾ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಎಂ.ಜಿ. ರಘುರಾಮ್, ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆಯ ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ, ಗೈಡ್ಸ್ ಆಯುಕ್ತೆ ರಾಣಿ ಮಾಚಯ್ಯ, ಸ್ಥಾನಿಕ ಆಯುಕ್ತ ಹೆಚ್.ಆರ್. ಮುತ್ತಪ್ಪ, ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ, ಸಂಸ್ಥೆಯ ಪದಾಧಿಕಾರಿಗಳು ಹಾಗೂ ವಿಜ್ಞಾನ ಪರಿಷತ್ತಿನ ಕಾರ್ಯಕರ್ತರಾದ ಎಂ.ಎನ್. ವೆಂಕಟನಾಯಕ್, ಎಂ.ಎಸ್.ಗಣೇಶ್, ಕಲಾವಿದ ಭರಮಣ್ಣ ಬೆಟಗೇರಿ, ಹ್ಯೂಮನ್ ವರ್ಲ್ಡ್ ಸಂಸ್ಥೆಯ ನಿರ್ದೇಶಕ ಸುಮಂತ್ ಹಾಗೂ ಯೋಜನಾ ಸಮನ್ವಯಾಧಿಕಾರಿ ಡಾ ಸಿ.ಕೆ. ತಮ್ಮಯ್ಯ, ಸ್ವಯಂ ಸೇವಕರು, ಶಿಕ್ಷಣ ಇಲಾಖೆಯ ಸಂಪನ್ಮೂಲ ಶಿಕ್ಷಕರು, ಚಿತ್ರಕಲಾ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಜಿಲ್ಲೆಯ ಶಾಲಾ- ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.