ಮಡಿಕೇರಿ, ನ. ೯: ಕಾಂತೂರು ಮೂರ್ನಾಡು ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅನುಷ್ಠಾನ ಗೊಳಿಸಿರುವ ಜಲಜೀವನ್ ಮಿಷನ್ ಯೋಜನೆಯಡಿ ಕಾರ್ಯ ಗತಗೊಳಿಸ ಲಾದ ಕುಡಿಯುವ ನೀರು ಸರಬರಾಜು ಕಾಮಗಾರಿಯನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಸದರು ಹಾಗೂ ಶಾಸಕರು, ಜಲಜೀವನ್ ಮಿಷನ್ ಯೋಜನೆಯ ಕಾರ್ಯಗತಗೊಳಿಸುವುದು ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ್ನು ನೀಡಲು ಉದ್ದೇಶಿಸಲಾಗಿದೆ. ಜಿಲ್ಲಾದ್ಯಂತ ಇದೇ ರೀತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಸಂಬAಧಿತ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿದಲ್ಲಿ ಯೋಜನೆ ಗಳನ್ನು ಉತ್ತಮವಾಗಿ ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೬ ಜನ ವಸತಿಗಳು ಒಳಗೊಂಡಿದ್ದು, ಸುಮಾರು ೯೯೯೫ ಜನಸಂಖ್ಯೆಗೆ ಸೇವೆ ಸಲ್ಲಿಸಲಾಗುತ್ತಿದೆ. ಒಟ್ಟು ೧೯೮೦ ಮನೆಗಳಿಗೆ ನೀರು ಸರಬರಾಜು ಮಾಡಲು ರೂ. ೧೧.೬೩ ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ಜನವಸತಿಗಳ ಪೈಕಿ ಕಿಗ್ಗಾಲು ಹಾಗೂ ಕಾಂತೂರು ಮೂರ್ನಾಡು ವಸತಿಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ಗ್ರಾ.ಪಂ.ಗೆ ಅಧಿಕೃತವಾಗಿ ಹಸ್ತಾಂತರಿಸಿ ನೀರು ಸರಬರಾಜು ವ್ಯವಸ್ಥೆಯನ್ನು ಪ್ರಾರಂಭಿ ಸಲಾಗಿದೆ. ಉಳಿದ ವಸತಿಗಳ ಕಾಮಗಾರಿಯನ್ನು ೨೦೨೫ರ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂದರ್ಭ ಇಲಾಖೆಯ ಕಾರ್ಯಪಾಲಕ ಅಭಿಯಂತರರು, ಮಡಿಕೇರಿ ಉಪವಿಭಾಗದ ಅಧಿಕಾರಿಗಳು, ಇಂಜಿನಿಯರ್‌ಗಳು, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ ಹಾಗೂ ಸದಸ್ಯರು, ಇತರೆ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.