ಮಡಿಕೇರಿ, ನ. ೨೬ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವು ಪ್ರಜಾಪ್ರಭುತ್ವದ ಬೆನ್ನೆಲುಬಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತ ಸಂವಿಧಾನವು ಪ್ರತಿಯೊಬ್ಬರಲ್ಲೂ ಹೊಣೆಗಾರಿಕೆ ಯನ್ನು ಹೆಚ್ಚಿಸಿದೆ.
ಭಾರತೀಯರು ಪ್ರತಿಯೊಬ್ಬರೂ ಸಂವಿಧಾನದ ಮೌಲ್ಯ ಎತ್ತಿ ಹಿಡಿಯಬೇಕು. ಪ್ರಜಾಪ್ರಭುತ್ವವನ್ನು ಬಲಪಡಿಸಲು ಮುಂದಾಗಬೇಕು.
ಭಾರತ ಸಂವಿಧಾನದಲ್ಲಿ ಮೂಲ ಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ತಿಳಿಸಲಾಗಿದೆ. ಆ ನಿಟ್ಟಿನಲ್ಲಿ ಮೂಲಭೂತ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಕರ್ತವ್ಯಗಳನ್ನು ಪಾಲಿಸುವುದು ಅತೀ ಮುಖ್ಯವಾಗಿದೆ. ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ. ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ೪ಏಳನೇ ಪುಟಕ್ಕೆ (ಮೊದಲ ಪುಟದಿಂದ)
ಮಾದರಿಯಾಗಿದೆ ಎಂದು ತಿಳಿಸಿದರು. ದಲಿತ ಸಂಘರ್ಷ ಸಮಿತಿಯ ತಾಲೂಕು ಘಟಕದ ಸಂಚಾಲಕ ದೀಪಕ್ ಪೊನ್ನಪ್ಪ ಮಾತನಾಡಿ ಭಾರತದ ಸಂವಿಧಾನವು ಜಗತ್ತಿನಲ್ಲಿಯೇ ಅತ್ಯಂತ ವಿಶಿಷ್ಟ ಸ್ಥಾನ ಹೊಂದಿದ್ದು, ಹಲವು ದಾಖಲೆಗಳಿಗೆ ಪಾತ್ರವಾಗಿದೆ.
ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸಾಮಾಜಿಕ ನ್ಯಾಯ ದೊರೆಯಬೇಕು ಎಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದರು.
ನಗರಸಭೆ ಅಧ್ಯಕ್ಷೆ ಪಿ. ಕಲಾವತಿ ಮಾತನಾಡಿ ಭಾರತದ ಸಂವಿಧಾನದಲ್ಲಿರುವ ಮೌಲ್ಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಸಂವಿಧಾನ ಪೀಠಿಕೆ ಓದಿದರು.
ಸಂವಿಧಾನ ದಿನಾಚರಣೆ ಪ್ರಯುಕ್ತ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಪ್ರಥಮ ಬಹುಮಾನ ರೂ.೨೫ ಸಾವಿರ, ದ್ವಿತೀಯ ೧೫ ಸಾವಿರ ಮತ್ತು ತೃತೀಯ ೧೦ ಸಾವಿರವನ್ನು ಆರ್‌ಟಿಜಿಎಸ್ ಮೂಲಕ ನೀಡಲಾಯಿತು.
ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾವೇದಿಕೆಯ ಈ.ರಾಜು ಮತ್ತು ತಂಡದವರು ನಾಡಗೀತೆ ಮತ್ತು ಸಂವಿಧಾನ ಗೀತೆಯನ್ನು ಹಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಘಟಕದ ಅಧ್ಯಕ್ಷ ಮಂದ್ರಿರ ಮೋಹನ್ ದಾಸ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ತಹಶೀಲ್ದಾರ್ ಶ್ರೀಧರ, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಂಚಾಲಕಿ ದಮಯಂತಿ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ದಿವಾಕರ, ಪ್ರಮುಖರಾದ ಕುಮಾರ, ಸಿದ್ದೇಶ್, ಚಂದನ್, ಇತರರು ಇದ್ದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ರಮೇಶ್ ನಿರೂಪಿಸಿ, ವಂದಿಸಿದರು.
ಗಮನ ಸೆಳೆದ ಜಾಥಾ ಭಾರತ ಸಂವಿಧಾನ ದಿನಾಚರಣೆ ಪ್ರಯುಕ್ತ ನಗರದ ಗಾಂಧಿ ಮೈದಾನದಿಂದ ಗಾಂಧಿ ಭವನದವರೆಗೆ ಜಾಥಾ ನಡೆಯಿತು. ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ನಗರದ ಗಾಂಧಿ ಮೈದಾನದಲ್ಲಿ ಜಾಥಾಗೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಚಾಲನೆ ನೀಡಿದರು. ಜಾಥಾದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಡೊಳ್ಳು ಕುಣಿತ ಕಾರ್ಯಕ್ರಮ ಜರುಗಿತು.
ಜಾಥಾ ವಾಹನದಲ್ಲಿ ವಿದ್ಯಾರ್ಥಿಯೊರ್ವ ಅಂಬೇಡ್ಕರ್ ವೇಷ ಧರಿಸಿ ಸಂವಿಧಾನ ಪುಸ್ತಕ ಹಿಡಿದು ಕೈ ತೋರಿಸುತ್ತಿದ್ದ ದೃಶ್ಯ ಮನ ಸೆಳೆಯಿತು.
ವಿವಿಧ ಶಾಲಾ-ಕಾಲೇಜಿನ ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸಂವಿಧಾನದ ಮಹತ್ವ ಕುರಿತ ಘೋಷವಾಕ್ಯ ಪ್ರದರ್ಶನ ಮಾಡಿದರು. ಶಾಲಾ-ಕಾಲೇಜಿನ ಶಿಕ್ಷಕರು, ಉಪನ್ಯಾಸಕರು, ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು. ನಗರಸಭೆ ಸದಸ್ಯ ಸತೀಶ್, ಮತ್ತಿತರರು ಇದ್ದರು.