ಸೋಮವಾರಪೇಟೆ, ನ. ೨೮: ಕಡಿಮೆ ಸಂಭಾವನೆ ಇದ್ದರೂ ಹೆಚ್ಚಿನ ದುಡಿಮೆಯಲ್ಲಿ ತೊಡಗಿಸಿಕೊಳ್ಳುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಮಾಜದಲ್ಲಿ ಶ್ರದ್ಧೆ ಮತ್ತು ಆತ್ಮವಿಶ್ವಾದಿಂದ ಕೆಲಸ ಮಾಡುತ್ತಿದ್ದಾರೆ ಎಂದು ತಾಲೂಕು ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಶ್ಲಾಘಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇಲಾಖೆ ವತಿಯಿಂದ ಪಟ್ಟಣದ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಐಸಿಡಿಎಸ್ ೫೦ನೇ ವರ್ಷದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರದ ಯೋಜನೆಗಳನ್ನು ಚಾಚೂತಪ್ಪದೆ ಮನೆಮನೆಗೆ ಪ್ರಾಮಾಣಿಕವಾಗಿ ತಲುಪಿಸುವ ಮಹತ್ತರ ಜವಾಬ್ದಾರಿಯೊಂದಿಗೆ ಮಕ್ಕಳ ಪೋಷಣೆಯಲ್ಲಿಯೂ ಪ್ರಾಮಾಣಿಕವಾಗಿ ಕೆಲಸ ಮಾಡುವ ಅಂಗನವಾಡಿ ಕಾರ್ಯಕರ್ತೆಯರು ಎಂದಿಗೂ ಸಂಭಾವನೆ ವಿಚಾರದಲ್ಲಿ ಕೆಲಸವನ್ನು ಬಿಟ್ಟಿಲ್ಲ. ಇಂದಿಗೂ ತಮಗೆ ವಹಿಸಿದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಇದು ಇತರರಿಗೆ ಮಾದರಿಯಾಗಬೇಕೆಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್ ಮಾತನಾಡಿ, ಅಂಗನವಾಡಿ ಮಕ್ಕಳ ಆರೈಕೆಯೊಂದಿಗೆ ಅನ್ಯ ಇಲಾಖೆಯ ಕೆಲಸ ಕಾರ್ಯಗಳನ್ನು ಯಾವುದೇ ಲೋಪದೋಷವಿಲ್ಲದೆ ನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಜೀವನ ಭದ್ರತೆಗೆ ಮೇಲಧಿಕಾರಿಗಳು ಮತ್ತು ಇಲಾಖೆಯ ಮೂಲಕ ಮನವಿ ಮಾಡಲಾಗುವುದು ಎಂದರು. ವೇದಿಕೆಯಲ್ಲಿ ಹಿರಿಯ ನಾಗರಿಕರು ಮತ್ತು ವಿಶೇಷಚೇತನರ ಕಲ್ಯಾಣಾಧಿಕಾರಿ ವಿಮಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಮುಧೋಳ್, ಅಂಗನವಾಡಿಯ ಹಿರಿಯ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಚಂದ್ರಿಕಾ ಕಾರ್ಯಕ್ರಮ ನಿರ್ವಹಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಶಿಶು ಅಭಿವೃದ್ಧಿ ಯೋಜನೆ ಇಲಾಖೆಯ ಕಚೇರಿ ಸಿಬ್ಬಂದಿಗಳಿAದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.