ವೀರಾಜಪೇಟೆ, ಡಿ. ೩: ಕರ್ನಾಟಕ ರಾಜ್ಯ ಸರಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ೨೦೨೩-೨೪ನೇ ಸಾಲಿನ ಅತ್ಯುತ್ತಮ ಗ್ರಾಮ ಪಂಚಾಯಿತಿಗೆ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ವೀರಾಜಪೇಟೆ ಕ್ಷೇತ್ರದ ಮಾಯಮುಡಿ ಪಂಚಾಯಿತಿಗೆ ಹಾಗೂ ಮಡಿಕೇರಿ ಕ್ಷೇತ್ರದ ಹೊದ್ದೂರು ಪಂಚಾಯಿತಿಗೆ ಪ್ರದಾನ ಮಾಡಲಾಯಿತು.

ವಿಧಾನಸೌಧದ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಪ್ರಶಸ್ತಿ ವಿತರಿಸಿದರು.

ಪ್ರಶಸ್ತಿಯನ್ನು ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಾಟು ಮೊಣ್ಣಪ್ಪ ಹಾಗೂ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಂಸ ಸ್ವೀಕರಿಸಿದರು. ಬಳಿಕ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿದರು.