ಸಿದ್ದಾಪುರ, ಡಿ. ೬ : ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಲ ಗ್ರಾಮದ ಮಠ ಭಾಗಕ್ಕೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವ ನೂತನ ವಿದ್ಯುತ್ ಮಾರ್ಗವನ್ನು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಪೊನ್ನಣ್ಣ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ರೂ. ೨೦ಲಕ್ಷ ವೆಚ್ಚದಲ್ಲಿ ನೂತನ ವಿದ್ಯುತ್ ಮಾರ್ಗವನ್ನು ಪ್ರಾರಂಭಿಸಲಾಗಿದೆ ಎಂದರು. ವೀರಾಜಪೇಟೆ ಕ್ಷೇತ್ರದಲ್ಲಿ ಈಗಾಗಲೇ ವಿದ್ಯುತ್ ಸಮಸ್ಯೆ ಇರುವ ಬಹುತೇಕ ಗ್ರಾಮಗಳಲ್ಲಿ ಸಮಸ್ಯೆಯನ್ನು ಬಗೆಹರಿಸಲಾಗಿದೆ.
ಹಳೆ ವಿದ್ಯುತ್ ಕಂಬಗಳನ್ನು ಬದಲಾಯಿಸಿ ಉತ್ತಮ ಗುಣಮಟ್ಟದ ಹೊಸ ಕಂಬಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು. ವಿರಾಜಪೇಟೆ ಪೇಟೆ ಕ್ಷೇತ್ರದ ದಕ್ಷಿಣ ಕೊಡಗಿನ ಭಾಗದಲ್ಲಿ ಕೂಡ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸಲಾಗಿದ್ದು ಸರಕಾರದ ಯೋಜನೆ ಅಡಿಯಲ್ಲಿ ಅನುದಾನವನ್ನು ಬಿಡುಗಡೆಗೊಳಿಸಿ ನೂತನ ವಿದ್ಯುತ್ ಮಾರ್ಗಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಚಿನ್ನಮ್ಮ, ಹೆಚ್.ಎಸ್. ಗಣೇಶ ಸೇರಿದಂತೆ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.
ಇದೇ ಸಂದರ್ಭದಲ್ಲಿ ಬಾಡಗ ಬಾಣಂಗಾಲ ಗ್ರಾಮದಲ್ಲಿ ಇರುವ ಹಳೆ ಕಿರು ಸೇತುವೆಯನ್ನು ಶಾಸಕ ಪೊನ್ನಣ್ಣ ಪರಿಶೀಲನೆ ಮಾಡಿದರು.