ಮಡಿಕೇರಿ, ಡಿ. ೭: ಡಾ. ಬಿ.ಆರ್. ಅಂಬೇಡ್ಕರ್ ಅವರ ಮೌಲ್ಯ, ಜೀವನ ಸಾಧನೆಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೯ನೇ ಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶ - ವಿದೇಶಗಳಲ್ಲಿ ಹಲವು ಸ್ನಾತಕೋತ್ತರ ಪದವಿ ಪಡೆದು ರಾಷ್ಟçಕ್ಕೆ ಒಳ್ಳೆಯ ಸಂವಿಧಾನ ನೀಡಿದ್ದಾರೆ. ಅವರ ಜೀವನ ಸಂದೇಶಗಳನ್ನು ತಿಳಿದುಕೊಳ್ಳುವಂತಾಗಬೇಕು.

ದೇಶ - ವಿದೇಶಗಳಲ್ಲಿ ಅಂಬೇಡ್ಕರ್ ಅವರ ಅಧ್ಯಯನ ಕೇಂದ್ರಗಳು ಹಾಗೂ ಸಂಶೋಧನಾ ಕೇಂದ್ರಗಳು ಇವೆ. ಇಡೀ ಪ್ರಪಂಚದಲ್ಲಿಯೇ ಅವರು ಅಜರಾಮರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ಮರಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಮಾತನಾಡಿ, ಸುಮಾರು ಆರು ದಶಕಗಳ ಹೋರಾಟದ ನಂತರ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣವಾಗುತ್ತಿದೆ ಎಂದರು.

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು. ನಗರಸಭೆ ಸದಸ್ಯ ಎಸ್.ಸಿ. ಸತೀಶ್, ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ಪ್ರಮುಖರಾದ ಮೋಹನ್ ಮೌರ್ಯ, ಪ್ರೇಮ್ ಕುಮಾರ್, ರಮೇಶ್, ಸಿದ್ದೇಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.