ಮಡಿಕೇರಿ: ಭಾರತೀಯ ಜನತಾ ಪಾರ್ಟಿ ಎಸ್.ಸಿ. ಮೋರ್ಚಾದಿಂದ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿವಸವನ್ನು ಮಡಿಕೇರಿಯ ಡಾ. ಬಿ.ಆರ್. ಅಂಬೇಡ್ಕರ್ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಆಚರಿಸಲಾಯಿತು.
ಎಸ್.ಸಿ. ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ. ರವಿ ಮಾತನಾಡಿ, ಡಾ. ಅಂಬೇಡ್ಕರ್ ಅವರು ಆಧುನಿಕ ಭಾರತವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಪ್ರಮುಖ ನಾಯಕರಾಗಿದ್ದಾರೆ. ಎಲ್ಲಾ ನಾಗರಿಕರಿಗೆ ನ್ಯಾಯ, ಸಮಾನತೆ ಮತ್ತು ಘನತೆ ಸಿಗುವಂತಾಗಲು ಶ್ರಮಿಸಿದವರಾಗಿದ್ದಾರೆ ಎಂದರು.
ಎಸ್.ಸಿ. ಮೋರ್ಚಾದ ಮಡಿಕೇರಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ, ಈರ ಸುಬ್ಬಯ್ಯ ಸ್ವಾಗತಿಸಿ, ಮಡಿಕೇರಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಮಹೇಶ್ ವಂದಿಸಿದರು.
ಕಾರ್ಯಕ್ರಮದಲ್ಲಿ ಎಸ್.ಸಿ. ಮೋರ್ಚಾದ ಪದಾಧಿಕಾರಿಯಾದ ಸಂದೀಪ್, ಸದಸ್ಯರುಗಳು, ವಿದ್ಯಾರ್ಥಿ ನಿಲಯದ ಸಿಬ್ಬಂದಿಸ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಕೂಡಿಗೆ: ಕೂಡಿಗೆ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು.
ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶಾಲಾ ಪ್ರಾಂಶುಪಾಲೆ ಕೆ .ಆರ್. ಭಾರತಿ ಮಾತನಾಡಿ ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ನಾವೆಲ್ಲರೂ ಮುನ್ನಡೆಯೋಣ ಎಂದರು. ಸಮಾಜ ವಿಜ್ಞಾನ ಶಿಕ್ಷಕ ನಾಗೇಂದ್ರ, ಶಾಲೆಯ ಗಣಕಯಂತ್ರ ಶಿಕ್ಷಕಿ ಕೆ. ವಿ. ಅಮೃತ ದೈಹಿಕ ಶಿಕ್ಷಣ ಶಿಕ್ಷಕ ದೊಡ್ಡಯ್ಯ ಮಾತನಾಡಿದರು. ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ಸೋಮವಾರಪೇಟೆ: ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಡಾ. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವುದರೊಂದಿಗೆ ನಮನ ಸಲ್ಲಿಸಲಾಯಿತು. ಸೋಮವಾರಪೇಟೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎ. ಆದಂ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಸಮಾನತೆ ಮತ್ತು ಮಾನವೀಯತೆ ಬೆಳೆಸುವಲ್ಲಿ ಅಂಬೇಡ್ಕರ್ ಅವರ ಚಿಂತನೆಗಳು, ಮಾರ್ಗದರ್ಶನ ಅತ್ಯವಶ್ಯಕ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ವೇದಕುಮಾರ್, ಎಚ್.ಎ. ನಾಗರಾಜ್, ಹೊನ್ನಪ್ಪ, ಟಿ.ಈ.ಸುರೇಶ್, ಸಂದೀಪ್, ದಾಮೋದರ್, ವಿವಿಧ ಇಲಾಖಾಧಿಕಾರಿಗಳು, ಅಂಗನವಾಡಿ ಶಿಕ್ಷಕರು ಮತ್ತು ವಿವಿಧ ಸಂಘಟನೆಗಳ ಪ್ರಮುಖರು ಇದ್ದರು.ಕುಶಾಲನಗರ: ಕುಶಾಲನಗರ ತಾಲೂಕು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಕುಶಾಲನಗರದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಿಸಲಾಯಿತು. ಕಾರ್ಯಕ್ರಮಮದಲ್ಲಿ ಪಾಲ್ಗೊಂಡಿದ್ದ ಗಣ್ಯರು ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.
ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಜ್ಞಾನದ ಬುತ್ತಿಯಾಗಿದ್ದ ಡಾ. ಅಂಬೇಡ್ಕರ್ ಇತರಿಗಾಗಿ ಬದುಕಿದವರು. ಸಮಾನತೆಗಾಗಿ ಬದುಕನ್ನು ಮುಡಿಪಾಗಿರಿಸಿದವರು ಎಂದರು. ವಿವಿಧ ಸಂಘ ಸಂಸ್ಥೆಗಳ ಪ್ರಮುಖರಾದ ಕೆ.ಬಿ. ರಾಜು, ದಾಮೋದರ್, ನಂಜುAಡಸ್ವಾಮಿ, ಪುರಸಭೆ ಮಾಜಿ ಸದಸ್ಯ ವಿ.ಜೆ. ನವೀನ್, ಪೊಲೀಸ್ ಅಧಿಕಾರಿ ಗೀತಾ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದರಾಜು, ರವಿ ಮತ್ತಿತರರು ಇದ್ದರು.