ವೀರಾಜಪೇಟೆ, ಡಿ. ೯: ವೀರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರಸ್ತೆಗಳ ವೀಕ್ಷಣೆ ಕಾರ್ಯಕ್ರಮ ಕೈಗೊಂಡರು.

ಪುರಸಭಾ ವ್ಯಾಪ್ತಿಯಲ್ಲಿ ಹಾದು ಹೋಗುವ ರೂ. ೫.೬೦ ಕೋಟಿ ಅನುದಾನದಲ್ಲಿ ಅಭಿವೃದ್ಧಿಗೊಳ್ಳುತ್ತಿರುವ, ಲೋಕೋಪಯೋಗಿ ರಸ್ತೆಗಳ ವೀಕ್ಷಣೆಯನ್ನು ಕಾಲ್ನಡಿಗೆಯಲ್ಲಿ ತೆರಳಿದರು. ಬಳಿಕ ಮಾತನಾಡಿದ ಶಾಸಕರು, ಈಗ ಮಳೆ ನಿಂತಿರುವ ಕಾರಣ ತುರ್ತು ಗತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಅತಿ ಶೀಘ್ರದಲ್ಲಿ ಈ ಕಾಮಗಾರಿ ಪೂರ್ಣಗೊಂಡು ರಸ್ತೆ ಸಂಚಾರ ನಾಗರಿಕರಿಗೆ ಸುಗಮವಾಗಲಿದೆ ಎಂದು ಹೇಳಿದರು. ಈ ಬಾರಿಯ ತೀವ್ರ ಮಳೆಯಿಂದಾಗಿ ರಸ್ತೆಗಳು ಹಾನಿಯಾಗಿದ್ದು ಸಾರ್ವಜನಿಕರು ಕೆಲಸ ಪೂರ್ಣಗೊಳ್ಳುವ ತನಕ ಸಹಕರಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವೀರಾಜಪೇಟೆ ಬ್ಲಾಕ್ ನಗರ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮಾಜಿ ಸದಸ್ಯರು ಹಾಗೂ ಪಕ್ಷದ ಮುಖಂಡರು, ಯುವ ಕಾಂಗ್ರೆಸ್ ಅಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಹಾಜರಿದ್ದರು.