ನಾಪೋಕ್ಲು, ಡಿ. ೧೧: ಕಕ್ಕಬ್ಬೆ-ಕುಂಜಿಲ ಗ್ರಾಮ ಪಂಚಾಯಿತಿಯ ೨೦೨೫-೨೬ನೇ ಸಾಲಿನ ಮಕ್ಕಳ ಗ್ರಾಮ ಸಭೆಯನ್ನು ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ನಡೆಸಲಾಯಿತು. ಕುಂಜಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಫಾತಿಮಾ ಮುಬಾಶಿರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕಕ್ಕಬ್ಬೆ-ಕುಂಜಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಲೋಕೇಶ್ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಮಕ್ಕಳು ಮಂಡಿಸಿದ ಅಹವಾಲುಗಳನ್ನು ಮುಂದಿನ ಕ್ರಿಯಾ ಯೋಜನೆಯಲ್ಲಿ ಅಳವಡಿಸಿಕೊಂಡು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬೀನಾ ಸುಚಿತ್ರ, ಸದಸ್ಯರಾದ ಕಲಿಯಂಡ ಸಂಪನ್ ಅಯ್ಯಪ್ಪ, ಚೋಯಮಾಡಂಡ ಹರೀಶ್ ಮೊಣ್ಣಪ್ಪ, ಕೋಡಿಮಣಿಯಂಡ ಬೋಪಣ್ಣ, ತುಕಡಿ ಸಾಫಿಯ, ನಂಬುಡಮAಡ ಶೈಲ, ಶಾಲಾ ಅಧ್ಯಾಪಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ಕೆ.ಪಿ. ಬಾಣೆ ಶಾಲಾ ಮಕ್ಕಳು ಸಂವಿಧಾನ ಪೀಠಿಕೆಯನ್ನು ವಾಚಿಸಿ ಮಕ್ಕಳ ಅಹವಾಲುಗಳನ್ನು ಸಭೆಯಲ್ಲಿ ಮಂಡಿಸಿದರು. ನಂತರ ಮಕ್ಕಳಿಗೆ ಕೆಲವು ಚಟುವಟಿಕೆಗಳನ್ನು ಮಾಡಿಸಿ ಮಾರ್ಗದರ್ಶನ ಮಾಡಲಾಯಿತು.