ಚೆಯ್ಯಂಡಾಣೆ, ಡಿ. ೧೭: ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿ ನದಿದಡದಿಂದ ಅಕ್ರಮವಾಗಿ ಮರಳು ಗಣಿಗಾರಿಕೆ, ಸಾಗಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಮರಳು ಸಾಗಿಸುವ ದಾರಿಗೆ ಅಡ್ಡಲಾಗಿ ಟ್ರಂಚ್ ತೆಗೆದು ಮರಳು ದಂಧೆಗೆ ಕಡಿವಾಣ ಹಾಕಿದ್ದಾರೆ.
ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಚೆರಿಯಪರಂಬು, ಕೂರುಳಿ ಗ್ರಾಮದಲ್ಲಿರುವ ಕಾವೇರಿ ನದಿ ದಡದಿಂದ ಅಕ್ರಮವಾಗಿ ಮರಳು ದಂಧೆ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಧಾವಿಸಿದ ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಪರಿಶೀಲಿಸಿ ಜೆಸಿಬಿ ಯಂತ್ರದ ಮೂಲಕ ಕಾವೇರಿ ನದಿ ದಡಕ್ಕೆ ಮರಳು ತೆಗೆಯಲು ತೆರಳುವ ರಸ್ತೆಗೆ ಅಡ್ಡಲಾಗಿ ಟ್ರಂಚ್ (ಚರಂಡಿ)ತೆಗೆದು ವಾಹನಗಳು ತೆರಳದಂತೆ ಕ್ರಮ ಕೈಗೊಂಡು ಮರಳು ದಂಧೆಗೆ ಕಡಿವಾಣ ಹಾಕಿದ್ದಾರೆ.
ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದಲ್ಲಿ ಸಾರ್ವಜನಿಕರು ನಾಪೋಕ್ಲು ಪೊಲೀಸ್ ಠಾಣೆಗೆ ಅಥವಾ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಮಾಹಿತಿ ನೀಡುವಂತೆ ಪೋಲಿಸ್ ಇಲಾಖೆಯ ಪ್ರಕಟಣೆ ತಿಳಿಸಿದೆ. -ಅಶ್ರಫ್