ಮಡಿಕೇರಿ, ಡಿ. ೨೯: ಕಾವೇರಿ ನದಿಮೂಲಗಳ ಸಂರಕ್ಷಣೆಗೆ ಒತ್ತಾಯಿಸಿ ಕೊಡಗು ಅಭಿವೃದ್ಧಿ ಸಮಿತಿ ಮುಂದಾಳತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಗರದ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಯಿತು. ಕಾವೇರಿ ನದಿ ರಕ್ಷಣೆಗೆ ಪರಿಣಾಮಕಾರಿ ಕ್ರಮಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.
ಸಮಿತಿ ಜಿಲ್ಲಾಧ್ಯಕ್ಷ ಪ್ರಸನ್ನ ಭಟ್ ಮಾತನಾಡಿ, ತ್ಯಾಜ್ಯಗಳು ಕಾವೇರಿ ನದಿ ಸೇರಿ ಮಲಿನವಾಗುತ್ತಿದೆ. ಈ ಹಿಂದೆಯೂ ಪ್ರತಿಭಟನೆ ನಡೆಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಗಿತ್ತು. ಆದರೆ, ಯಾವುದೇ ಪರಿಹಾರ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿಲ್ಲ. ಮುಂದೆಯೂ ಕ್ರಮವಾಗದಿದ್ದಲ್ಲಿ ತಾ. ೨೧ ರಂದು ಅಪಾರ ಸಂಖ್ಯೆಯ ಜನರನ್ನು ಸೇರಿಸಿ ತೀವ್ರ ರೀತಿಯ ಹೋರಾಟ ನಡೆಸಲಾಗುವುದು. ಅನಾಹುತ ಸಂಭವಿಸಿದರೆ ಜಿಲ್ಲಾಡಳಿತ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾವೇರಿ ನದಿಗೆ ತ್ಯಾಜ್ಯ ಎಸೆಯುತ್ತಿರುವವರ ವಿರುದ್ಧ ತಕ್ಷಣ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ತಪ್ಪಿತಸ್ಥರ ಮೇಲೆ ಭಾರೀ ದಂಡ ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸುವ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಡಿಸಿ ಆಗಮನಕ್ಕೆ ಪಟ್ಟು
ಮನವಿ ಸ್ವೀಕರಿಸಲು ಜಿಲ್ಲಾಧಿಕಾರಿ ಆಗಮಿಸುವಂತೆ ಪ್ರತಿಭಟನಾನಿರತರು ಪಟ್ಟು ಹಿಡಿದರು. ಇದರಿಂದ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು.
ಡಿಸಿ ಸಭೆಯೊಂದರಲ್ಲಿ ಇರುವ ಕಾರಣ ಬರಲು ಅಸಾಧ್ಯ ಎಂದ ಸಂದರ್ಭ ಪ್ರತಿಭಟನಾಕಾರರು ಜಿಲ್ಲಾಡಳಿತ ಭವನಕ್ಕೆ ನುಗ್ಗಲು ಯತ್ನಿಸಿದರು. ಇದನ್ನು ಪೊಲೀಸರು ತಡೆದರು. ನಂತರ ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಆಗಮಿಸಿ ಮನವಿ ಸ್ವೀಕರಿಸಿದರು.
ಪ್ರತಿಭಟನೆಯಲ್ಲಿ ಕನ್ನಡ ರಕ್ಷಣಾ ವೇದಿಕೆ, ರೈತ ಸಂಘ, ಕರ್ನಾಟಕ ಯುವ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆ ಸದಸ್ಯರು ಭಾಗವಹಿಸಿದ್ದರು.