ವೀರಾಜಪೇಟೆ, ಜ. ೧ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವೀರಾಜಪೇಟೆ ತಾಲೂಕು ಶಾಖೆಯ ವತಿಯಿಂದ ವೀರಾಜಪೇಟೆ ತಾಲೂಕು ಮಟ್ಟದ ಮಹಾಸಭೆ ಜನವರಿ ೪ ರಂದು ಅಂಬೇಡ್ಕರ್ ಭವನದಲ್ಲಿ ಪೂರ್ವಾಹ್ನ ೧೦ ಗಂಟೆಗೆ ಸಂಘದ ಅಧ್ಯಕ್ಷ ಕೆ.ಎಂ. ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು.

ವೀರಾಜಪೇಟೆ ಪ್ರೆಸ್‌ಕ್ಲಬ್‌ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಎಂ. ತಿಮ್ಮಯ್ಯ, ಈ ಮಹಾಸಭೆಯಲ್ಲಿ ನೌಕರರ ಹಿತರಕ್ಷಣೆ ಮತ್ತು ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಲಾಗುವುದು. ಇದೇ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ನೌಕರರನ್ನು ಮತ್ತು ಶಿಕ್ಷಣ ಸೇವೆ ಮತ್ತು ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ನೌಕರರ ಮಕ್ಕಳನ್ನು ಸನ್ಮಾನಿಸಲಾಗುವುದು.

ಕಾರ್ಯಕ್ರಮದಲ್ಲಿ ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ತಹಶೀಲ್ದಾರ್ ಪ್ರವೀಣ್ ಕುಮಾರ್, ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು ಎಂದು ಹೇಳಿದರು.

ಗೋಷ್ಠಿಯಲ್ಲಿ ಕಾರ್ಯದರ್ಶಿ ಬಿ.ಟಿ. ದೇವರಾಜ್, ಖಜಾಂಚಿ ಎನ್.ಎಸ್. ಬಸವರಾಜ್, ರಾಜ್ಯ ಪರಿಷತ್ ಸದಸ್ಯ ಈ. ಸುರೇಂದ್ರ ಉಪಸ್ಥಿತರಿದ್ದರು.