ಮಡಿಕೇರಿ, ಜ. ೯: ಹುಬ್ಬಳ್ಳಿಯಲ್ಲಿ ಗಲಾಟೆ ಪ್ರಕರಣದಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತೆಯನ್ನು ವಶಕ್ಕೆ ಪಡೆಯುವಾಗ ಪೊಲೀಸರು ಆಕೆಯನ್ನು ವಿವಸ್ತçಗೊಳಿಸಿ ಹಲ್ಲೆ ಮಾಡಿದ್ದಾರೆ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಮಾನಕಾರಿ ಪೋಸ್ಟ್ಗಳನ್ನು ಮಾಡಿ ವಿಕೃತಿ ಮೆರೆಯಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯೆ ನೀಡಿದ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತೆ ಮೇಲೆ ಪೋಲಿಸರು ದರ್ಪ ತೋರಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಬಿಜೆಪಿ ಕಾರ್ಯಕರ್ತೆ ಮೇಲೆ ದೌರ್ಜನ್ಯ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ಮಹಿಳೆಗೆ ಸಹಾಯ ಮಾಡಬೇಕಾದ ಪೊಲೀಸರು ಹುಬ್ಬಳ್ಳಿ ಪಾಲಿಕೆಯ ಕಾಂಗ್ರೆಸ್ ಸದಸ್ಯೆಯ ಮಾತು ಕೇಳಿ ಅವರ ಪರ ನಿಂತು ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತçಗೊಳಿಸಿ ಹಲ್ಲೆಗೈದಿರುವುದು ಸರಿಯಲ್ಲ. ಸರಕಾರ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ಇಂತಹ ಸರಕಾರವನ್ನು ಕಿತ್ತೊಗೆಯಬೇಕು ಎಂದು ಆಗ್ರಹಿಸಿದ ಅವರು, ಸುಳ್ಯ ಶಾಸಕಿ ಭಾಗೀರಥಿ ಅವರನ್ನು ಅವಮಾನಿಸುವ ಪೋಸ್ಟ್ ಅನ್ನು ಕಾಂಗ್ರೆಸ್ನ ಕಾರ್ಯಕರ್ತರು ಹಂಚಿಕೊಳ್ಳುತ್ತಿರುವುದು ಸರಿಯಲ್ಲ. ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ನೆಲ್ಲೀರ ಚಲನ್, ಮಹೇಶ್ ಜೈನಿ. ಲೋಕೇಶ್, ವಕ್ತಾರ ಬಿ.ಕೆ. ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಬಿಜೆಪಿ ಮಾಜಿ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ನಗರಸಭಾ ಅಧ್ಯಕ್ಷೆ ಕಲಾವತಿ ಸೇರಿದಂತೆ ಇನ್ನಿತರರು ಹಾಜರಿದ್ದರು.