ಸೋಮವಾರಪೇಟೆ, ಜ. ೧೧: ಫೆ. ೯ರಂದು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಐಗೂರಿನಲ್ಲಿ ನಡೆಯುವ ಸೋಮವಾರಪೇಟೆ ತಾಲೂಕು ೯ನೇ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕಿ ಹಾಗೂ ಹಿರಿಯ ಸಾಹಿತಿ ಜಲಜಾ ಶೇಖರ್ ಆಯ್ಕೆಯಾಗಿದ್ದಾರೆ.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಸಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಾಲೂಕು ೯ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಜಲಜಾ ಶೇಖರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಪಟ್ಟಣದ ಬಸವೇಶ್ವರ ರಸ್ತೆ ನಿವಾಸಿಯಾಗಿರುವ ಜಲಜಾ ಶೇಖರ್ ಅವರು, ಅಧ್ಯಾಪಕರಾಗಿ, ಮುಖ್ಯೋಪಾಧ್ಯಾಯರಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸುಮಾರು ೩೦ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ಸಾಕಷ್ಟು ಕೃಷಿ ಮಾಡಿದ್ದಾರೆ. ಇಲ್ಲಿಯವರೆಗೆ ಏಳು ಪುಸ್ತಕಗಳನ್ನು ಇವರು ಹೊರತಂದಿದ್ದು, ಇವರ ಎಂಟನೆಯ ಪುಸ್ತಕವು ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಗೊಳ್ಳಲಿದೆ. ವಿಚಾರದೆಡೆಗೆ, ನೆಲಮುಗಿಲು, ಅಗ್ನಿಕುಂಡ, ಪ್ರತೀಕ್ಷ, ವಿಲೋಕನ ವೈಚಾರಿಕ ಲೇಖನಗಳು, ದೂರ ತೀರ ಯಾನ ಪ್ರವಾಸ ಕಥನ, ಕನ್ನಡಿಯ ಬಿಂಬ ಕೃತಿಗಳನ್ನು ರಚಿಸಿದ್ದಾರೆ.
ಶೈಕ್ಷಣಿಕ, ಸಾಹಿತ್ಯ ಅಲ್ಲದೆ ಸಾಮಾಜಿಕ ಮತ್ತು ಸಹಕಾರ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು ಸೋಮವಾರಪೇಟೆಯ ಅಕ್ಕನ ಬಳಗದ ಅಧ್ಯಕ್ಷರಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದ್ದಾರೆ. ಪಟ್ಟಣದ ಅಕ್ಷಯ ಪತ್ತಿನ ಮಹಿಳಾ ಸಹಕಾರ ಸಂಘದ ನಿರ್ದೇಶಕರಾಗಿ, ಅಧ್ಯಕ್ಷರಾಗಿಯೂ ಸಹಕಾರ ಕ್ಷೇತ್ರದಲ್ಲಿ ಸೇವೆ ಮಾಡಿದ್ದಾರೆ. ಪ್ರಸ್ತುತ ಕೊಡಗು ಡಿ.ಸಿ.ಸಿ. ಬ್ಯಾಂಕ್ನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಲೇಖಕಿಯಾಗಿ ಹಲವಾರು ಸಾಹಿತ್ಯ ಸಮ್ಮೇಳನಗಳಲ್ಲಿ ವಿಚಾರ ಮಂಡನೆ, ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ. ಇವರ ಪತಿ ಜೆ.ಸಿ. ಶೇಖರ್ ಅವರೂ ಸಹ ನಿವೃತ್ತ ಮುಖ್ಯೋಪಾಧ್ಯಾಯರಾಗಿದ್ದು, ಈ ಹಿಂದೆ ಸೋಮವಾರಪೇಟೆ ತಾಲೂಕು ಕಸಾಪದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.