ಕುಶಾಲನಗರ, ಜ. ೧೪: ದೈಹಿಕ, ಮಾನಸಿಕ ನ್ಯೂನ್ಯತೆಯುಳ್ಳ ವಿಶೇಷಚೇತನ ಮಕ್ಕಳ ಶಿಕ್ಷಣಕ್ಕೆ ಸಮಾಜದ ಎಲ್ಲಾ ವರ್ಗದವರ ಪ್ರೋತ್ಸಾಹ ಅಗತ್ಯವಿದೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ೨೦೨೫-೨೬ನೇ ಸಾಲಿನ ಕೊಡಗು ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ೧೪ ಮತ್ತು ೧೭ ವರ್ಷದೊಳಗಿನ ವಿಶೇಷಚೇತನ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ವಿಶೇಷ ಚೇತನ ಮಕ್ಕಳಿಗೂ ಕ್ರೀಡಾಕೂಟದಲ್ಲಿ ಅವಕಾಶ ನೀಡಿ ಅವರ ಪ್ರತಿಭೆಗೆ ಪ್ರೋತ್ಸಾಹ ನೀಡುವ ಸರ್ಕಾರದ ಯೋಜನೆ ಅತ್ಯುತ್ತಮವಾಗಿದೆ. ಇದರ ಸದ್ಬಳಕೆಯನ್ನು ವಿಶೇಷಚೇತನ ಮಕ್ಕಳು ಬಳಸಿಕೊಳ್ಳಬೇಕು ಎಂದರು.
ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಡಾ. ಸದಾಶಿವಯ್ಯ ಎಸ್. ಪಲ್ಲೇದ್ ಮಾತನಾಡಿ, ಕೊಡಗು ಜಿಲ್ಲೆಯಿಂದ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡಲಾಗುತ್ತಿದೆ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ರಾಮನಗರದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದರು.
ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಉಪ ಪ್ರಾಂಶುಪಾಲ ಎ.ಸಿ. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ವಿಷಯ ಪರಿವೀಕ್ಷಕಿ ಬಿಂದು ಹಾಗೂ ಶರ್ಮಿಳ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಸುಕುಮಾರಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಸುರೇಶ್ ಕುಮಾರ್, ಸುಜಾತಾ, ನಾಗೇಶ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.