ಸೋಮವಾರಪೇಟೆ, ಜ. ೧೮: ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ವತಿಯಿಂದ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಯಿತು. ವಿವಿಧ ಇಲಾಖೆಗಳ ಕಾರ್ಯವೈಖರಿ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಿದರು. ಜಾಗದ ದುರಸ್ತಿ, ಪೋಡಿ ಕೆಲಸ ಕಾರ್ಯಗಳ ವಿಳಂಬದ ಬಗ್ಗೆ ದೂರುಗಳನ್ನು ಸಲ್ಲಿಸಲಾಯಿತು.
ಲೋಕಾಯುಕ್ತ ಡಿವೈಎಸ್ಪಿ ದಿನಕರಶೆಟ್ಟಿ ಮಾತನಾಡಿ, ಸಾರ್ವಜನಿಕರ ಕೆಲಸಗಳನ್ನು ಸರ್ಕಾರಿ ನೌಕರರು ನಿಗದಿತ ಸಮಯದಲ್ಲಿ ಮಾಡಿಕೊಡಬೇಕು. ವಿಳಂಬ ಮಾಡಿದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಕೆಲವರು ಲಿಖಿತ ದೂರುಗಳನ್ನು ಸಲ್ಲಿಸಿದ್ದಾರೆ. ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. ತಹಶೀಲ್ದಾರ್ ಕೃಷ್ಣಮೂರ್ತಿ ಮಾತನಾಡಿ, ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ನೌಕರರಿಗೆ ಕರ್ತವ್ಯದ ಕಾರ್ಯವೈಖರಿಯ ಬಗ್ಗೆ ತಿಳಿಸಿದ್ದಾರೆ. ಅದರಂತೆ ಕೆಲಸ ಮಾಡಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ವೀಣಾ ನಾಯಕ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್ ಮತ್ತು ವಿವಿಧ ಇಲಾಖಾಧಿಕಾರಿಗಳು ಇದ್ದರು.