ಕುಶಾಲನಗರ, ಜ. ೨೦: ಬೀದಿಬದಿ ವ್ಯಾಪಾರಿಗಳು ತಮ್ಮ ಹಾಗೂ ಕುಟುಂಬ ಸದಸ್ಯರ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಹೇಳಿದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿಬದಿ ವ್ಯಾಪಾರಿಗಳ ಘಟಕದ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹಲವಾರು ಸಮಸ್ಯೆಗಳನ್ನು ಬೀದಿಬದಿ ವ್ಯಾಪಾರಿಗಳು ಅನುಭವಿಸುತ್ತಿದ್ದಾರೆ. ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಬೀದಿಬದಿ ವ್ಯಾಪಾರಿಗಳ ಘಟಕವನ್ನು ಸ್ಥಾಪಿಸುವ ಮೂಲಕ ಅವರಿಗೆ ಬೆನ್ನೆಲುಬಾಗಿ ನಿಂತು ಅಗತ್ಯ ಸಹಕಾರ ನೀಡಲಾಗುತ್ತಿದೆ ಎಂದರು. ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಬೀದಿಬದಿ ವ್ಯಾಪಾರಿಗಳಲ್ಲಿ ತಾಜಾ ವಸ್ತುಗಳು ದೊರಕುತ್ತದೆ. ಹಲವಾರು ತೊಂದರೆಗಳನ್ನು ಅನುಭವಿಸುತ್ತಿರುವ ಬೀದಿಬದಿ ವ್ಯಾಪಾರಿಗಳ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಶಾಸನ ಬದ್ಧವಾಗಿ ಅಭಯಹಸ್ತ ನೀಡಿದೆ ಎಂದರು.
ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ಮಾತನಾಡಿ, ಸರಕಾರದಿಂದ ದೊರೆಯುವ ಸಾಲ ಸೌಲಭ್ಯವನ್ನು ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಅತಿ ಹೆಚ್ಚಿನ ಸಾಲ ಪಡೆದು ವ್ಯಾಪಾರ ಅಭಿವೃದ್ಧಿಪಡಿಸಬೇಕು ಎಂದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿಬದಿ ವ್ಯಾಪಾರಿಗಳ ಘಟಕದ ಜಿಲ್ಲಾಧ್ಯಕ್ಷ ಆದಂ ಎಸ್. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಗೋವಿಂದಪ್ಪ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಅಬ್ದುಲ್ ರಜಾಕ್, ಪುರಸಭೆ ಮಾಜಿ ನಾಮ ನಿರ್ದೇಶಿತ ಸದಸ್ಯ ಎಂ.ಎA. ಪ್ರಕಾಶ್, ಬೀದಿಬದಿ ವ್ಯಾಪಾರಿಗಳ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಲೀನಾ ಪೇದ್ರು, ಬೀದಿಬದಿ ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ಜಗದೀಶ್ ಮತ್ತಿತರರು ಇದ್ದರು.