ವೀರಾಜಪೇಟೆ, ಜ. ೨೪: ವೀರಾಜಪೇಟೆ ಪುರಸಭೆ ವ್ಯಾಪ್ತಿಯ ಸಂತ ಅನ್ನಮ್ಮ ಚರ್ಚ್ ರಸ್ತೆ (ಶಾಂತ ಚಿತ್ರಮಂದಿರ) ಸಮೀಪದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಶಾಸಕರ ಅನುದಾನದಲ್ಲಿ ನಿರ್ಮಿಸಿದ ನೂತನ ಶುದ್ಧ ಕುಡಿಯುವ ನೀರಿನ ಘಟಕವನ್ನು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಲೋಕಾರ್ಪಣೆಗೊಳಿಸಿದರು.
ನಂತರ ಮಾತನಾಡಿದ ಶಾಸಕರು, ಸಾರ್ವಜನಿಕರು ಆರೋಗ್ಯದ ಕಡೆ ಹೆಚ್ಚಿನ ಗಮನ ವಹಿಸಬೇಕು. ಪ್ರತಿಯೊಬ್ಬರ ಆರೋಗ್ಯದಲ್ಲಿ ಶುದ್ಧ ನೀರಿನ ಬಳಕೆ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಇದನ್ನು ಮನಗಂಡು ಸರಕಾರದ ವತಿಯಿಂದ ಈ ಭಾಗದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಆರಂಭಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ರೂ. ೫ ನಾಣ್ಯ ಹಾಕಿದರೆ ೨೦ ಲೀಟರ್ ನೀರು ಬರುತ್ತದೆ. ಪ್ರತಿಯೊಬ್ಬರೂ ಶುದ್ಧ ನೀರನ್ನು ಬಳಸಿ. ಈ ಘಟಕದ ಸದುಪಯೋಗವನ್ನು ಬಳಸಿಕೊಳ್ಳಬೇಕು ಎಂದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್, ಪುರಸಭೆ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬಸ್ಸ್ಸುಂ, ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ಸಂತ ಅನ್ನಮ್ಮ ಚರ್ಚ್ನ ಧರ್ಮಗುರುಗಳಾದ ಫಾ. ಜೇಮ್ಸ್ ಡೋಮಿನಿಕ್, ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲ ಫಾ. ಮದಲೈಮುತ್ತು, ವೀರಾಜಪೇಟೆ ಪ್ರಚಾರ ಸಮಿತಿ ಅಧ್ಯಕ್ಷ ಮತೀನ್, ಪುರಸಭೆ ಮಾಜಿ ಸದಸ್ಯರಾದ ರಾಜೇಶ್ ಪದ್ಮನಾಭ, ಮಹಮ್ಮದ್ ರಾಫಿ, ಬೆನ್ನಿ ಅಗಸ್ಟಿನ್, ರಜಿನಿಕಾಂತ್, ಪೃಥ್ವಿನಾಥ್, ಮೋಹನ್, ಅತಿಫ್ ಮನ್ನಾ ಹಾಗೂ ಇತರರು ಹಾಜರಿದ್ದರು.