ಮಡಿಕೇರಿ ಜ. ೩೦: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಭಾರತೀಯ ಸೇನೆಯಲ್ಲಿನ ಮಹತ್ವದ ಕಾರ್ಯಗಳು ಇಡೀ ವಿಶ್ವಕ್ಕೆ ಮಾದರಿ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಬೇಬಿ ಮ್ಯಾಥ್ಯು ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ವತಿಯಿಂದ ನಗರದ ಕೊಡಗು ವಿದ್ಯಾಲಯ ಶಾಲೆಯ ಸಭಾಂಗಣದಲ್ಲಿ ನಡೆದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮದಿನಾಚರಣೆ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಪ್ರಥಮ ಮಹಾ ದಂಡನಾಯಕರಾಗಿ ಭಾರತೀಯ ಸೇನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಸೇನಾ ಸಾಧನೆಯನ್ನು ಸ್ಮರಿಸುವಂತಾಗಬೇಕು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಕೊಡಗಿನ ಕಣ್ಮಣಿಗಳು ಎಂದು ಅವರು ಹೇಳಿದರು.
ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್, ಎನ್ಸಿಸಿ, ಎನ್ಎಸ್ಎಸ್ಗಳಿಗೆ ಸೇರಿಕೊಂಡು ಶಿಸ್ತಿನ ಸಿಪಾಯಿಗಳಾಗಬೇಕು ಎಂದು ಕರೆ ನೀಡಿದರು.
ಗೈಡ್ಸ್ ಜಿಲ್ಲಾ ತರಬೇತಿ ಆಯುಕ್ತರಾದ ಮೈಥಿಲಿ ರಾವ್ ಮಾತನಾಡಿ, ದೇಶಕ್ಕೆ ತನ್ನದೇ ಆದ ಕೊಡುಗೆ ನೀಡಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮದಿನವನ್ನು ಎಲ್ಲರೂ ಸಂಭ್ರಮಿಸಬೇಕು ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಜಿಲ್ಲೆಯಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದೀಗ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ರಸ್ತೆ ಸುರಕ್ಷತೆಯ ನಿಯಮಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭ ದೇಶಭಕ್ತಿ ಗೀತೆಯನ್ನು ಹಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಾಭಿಮಾನವನ್ನು ಮೂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ವಿದ್ಯಾರ್ಥಿಗಳು ಸ್ಕೌಟ್ಸ್-ಗೈಡ್ಸ್, ಎನ್ಸಿಸಿ, ಕ್ರೀಡೆ ಸೇರಿದಂತೆ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ಹೆಚ್ಚಿಸಿಕೊಳ್ಳಬೇಕು.
ಪುಸ್ತಕ, ಸಾಮಾಜಿಕ ಜಾಲತಾಣವನ್ನು ಸದುಪಯೋಗ ಪಡಿಸಿಕೊಂಡು ಅದರಲ್ಲಿನ ಮಾಹಿತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಾಗೂ ಇತರರಿಗೂ ಮಾಹಿತಿ ನೀಡಬೇಕು. ವಾಹನದಲ್ಲಿ ಚಲಿಸುವಾಗ ಮಾತ್ರವಲ್ಲದೆ ನಡೆಯುವಾಗಲೂ ನಿಯಮ ವನ್ನು ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕೊಡಗು ವಿದ್ಯಾಲಯದ ಪ್ರಾಂಶುಪಾಲೆ ಕೆ.ಎಸ್.ಸುಮಿತ್ರ, ಆಡಳಿತಾಧಿಕಾರಿ ಪಿ.ರವಿ, ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಎನ್.ಯು. ನೀಲಮ್ಮ, ಅರುಣ್ ಕುಮಾರ್, ಕಾರ್ಯದರ್ಶಿಗಳಾದ ಸುಚಿತಾ ಕಾವೇರಪ್ಪ, ಎಂ.ಟಿ.ಸೂರಜ್ ಕುಮಾರ್, ಪದಾಧಿಕಾರಿಗಳಾದ ಗುಲ್ಶನ್, ಕೆ. ಮಮತ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿಗಳಾದ ಅಪ್ಪಯ್ಯ, ತವಶಿ ಸ್ವಾಗತಿಸಿ, ನಿರೂಪಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆರ್.ಪಿ. ಚಂದ್ರಶೇಖರ್ ವಂದಿಸಿದರು.
ಸಭಾ ಕಾರ್ಯಕ್ರಮಕ್ಕೂ ಮುನ್ನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆ, ರಸ್ತೆ ಸುರಕ್ಷತೆ ಕುರಿತು ನಡೆದ ನೃತ್ಯ ಗಮನ ಸೆಳೆಯಿತು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜನ್ಮದಿನಾಚರಣೆ ಹಾಗೂ ರಸ್ತೆ ಸುರಕ್ಷತೆ ಕುರಿತು ವಿದ್ಯಾರ್ಥಿಗಳಿಗೆ ನಡೆಸಲಾದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.