ಗೋಣಿಕೊಪ್ಪಲು, ಜ. ೨೯: ನಗರದ ಪೌರ ಕಾರ್ಮಿಕರು ವಾಸಿಸುತ್ತಿರುವ ಪ್ರದೇಶದಲ್ಲಿರುವ ಹಂದಿ ಮಾಂಸದ ಮಳಿಗೆ, ಮೀನು ಮಾರುಕಟ್ಟೆಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಇದರೊಂದಿಗೆ ಪೌರ ಕಾರ್ಮಿಕರು ವಾಸಿಸುತ್ತಿರುವ ನಿವೇಶನಗಳನ್ನು ಪೌರ ಕಾರ್ಮಿಕರಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿದರು.

ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಿದ ಗೋಣಿಕೊಪ್ಪ ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರು ತಮ್ಮ ಬೇಡಿಕೆ ಈಡೇರಿಸುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.

೨೪ ಪೌರ ಕಾರ್ಮಿಕರ ಕುಟುಂಬದವರು ಹಲವಾರು ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸವಿದ್ದಾರೆ. ಜಿಲ್ಲಾಧಿಕಾರಿ ಗೋಣಿಕೊಪ್ಪಲು ಸ್ವಚ್ಚತಾ ಕಾರ್ಮಿಕರ ಕುಟುಂಬಗಳಿಗೆ ನಿವೇಶನ ನೀಡುವ ಉದ್ದೇಶಗಳಿಗೆ ಜಾಗವನ್ನು ಕಾಯ್ದಿರಿಸಿದ್ದಾರೆ. ಅಲ್ಲದೆ ಈ ಭಾಗದಲ್ಲಿರುವ ಮೀನು ಮಾರುಕಟ್ಟೆ, ಹಂದಿ ಮಾಂಸದ ಮಾರುಕಟ್ಟೆ, ಹಂದಿ ಸಾಕಾಣಿಕೆ ಗೂಡು ಹಾಗೂ ಸಪ್ಟಿಕ್ ಟ್ಯಾಂಕ್‌ಗಳನ್ನು ತೆರವುಗೊಳಿಸಲು ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಆದೇಶ ಪಾಲಿಸುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಗೋಣಿಕೊಪ್ಪ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಗ್ರಾ.ಪಂ. ಅಭಿವೃದ್ದಿ ಅಧಿಕಾರಿ ತಿಮ್ಮಯ್ಯ, ಉಪಾಧ್ಯಕ್ಷೆ ಎಂ.ಮAಜುಳ ಸದಸ್ಯರುಗಳು ಪೌರಕಾರ್ಮಿಕರ ಅಹವಾಲು ಆಲಿಸಿದರು.

ಈ ವೇಳೆ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ಪ್ರಮೋದ್ ಗಣಪತಿ ಈಗಾಗಲೇ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನಿರ್ದೇಶನದಂತೆ ಟೆಂಡರ್ ಪ್ರಕ್ರಿಯೆಯನ್ನು ಮುಂದೂಡುವ ತೀರ್ಮಾನವನ್ನು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯೂ ತೆಗೆದುಕೊಂಡಿದೆ. ಪರಿಶೀಲಿಸಿ ಸೂಕ್ತ ಕ್ರಮವಹಿಸಲಾಗುವುದು ಎಂದರು.

ಪ್ರತಿಭಟನಾ ವೇಳೆ ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳಾದ ಪಿ.ಮಂಜುನಾಥ್, ರಂಗಣ್ಣ, ಶಿವು ಶ್ರೀನಿವಾಸ್, ಸಿ.ಆರ್.ವಿಜಯ್, ಮಂಚಯ್ಯ, ದಿನೇಶ್ ಕುಮಾರ್, ವಿಜಯ್ ಕುಮಾರ್, ಪರಮೇಶ್, ಗಿರೀಶ್, ರಾಮು, ಗಣೇಶ್ ಮುಂತಾದವರು ಉಪಸ್ಥಿತರಿದ್ದರು.