ಸಿದ್ದಾಪುರ, ಜ. ೩೦: ಚೆನ್ನಯ್ಯನಕೋಟೆ ಸರ್ಕಾರಿ ಶಾಲೆಯ ವಾರ್ಷಿಕೋತ್ಸವ ವಿವಿಧ ಕ್ರೀಡಾ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನೆರವೇರಿತು.

ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿಭೆ ಅನಾವರಣಗೊಳಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷಿö್ಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಕಲಿತ ಅದೆಷ್ಟೊ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಂಡು ಮುನ್ನಡೆದಿದ್ದಾರೆ. ಈಗಿನ ಶಿಕ್ಷಣ ವ್ಯವಸ್ಥೆ ಸಾಕಷ್ಟು ಬದಲಾವಣೆಯಾಗಿದೆ. ಸರ್ಕಾರಗಳ ಹಲವಾರು ಸೌಲಭ್ಯಗಳು ಮಕ್ಕಳ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಎಂದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಶ್ ಮಾತನಾಡಿ, ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು ಯಾವುದೇ ಕೊರತೆ ಇಲ್ಲದೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ, ಇದರ ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬಂದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.

ಸಮಾಜ ಸೇವಕ ವಾಟೇರಿರ ಸುರೇಶ್ ಸೋಮಯ್ಯ ಮಾತನಾಡಿ, ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಾದರೂ ಹಲವು ವರ್ಷಗಳಿಂದ ಅತ್ಯುತ್ತಮವಾಗಿ ಮುನ್ನಡೆಯುತ್ತಿದ್ದು ಶಿಕ್ಷಣ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳು ಜಿಲ್ಲೆ, ರಾಜ್ಯ ಪ್ರಶಸ್ತಿಗಳನ್ನು ಗಳಿಸುವುದರ ಮೂಲಕ ಗ್ರಾಮಕ್ಕೆ ಮಾದರಿಯಾಗಿದ್ದಾರೆ ಎಂದು ಮೆಚ್ಚಿಗೆ ವ್ಯಕ್ತಪಡಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಎಚ್.ಎ ರಾಜಮ್ಮ ಮಾತನಾಡಿ, ಶಿಕ್ಷಕರುಗಳ ಸಹಕಾರದಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡುವುದರ ಮೂಲಕ ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ತಾಲೂಕು, ಜಿಲ್ಲೆ, ರಾಜ್ಯಮಟ್ಟದಲ್ಲೂ ಗುರುತಿಸಿಕೊಂಡು ಪ್ರಶಸ್ತಿ ಗಳಿಸಿದ್ದಾರೆ. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸುವುದರ ಮೂಲಕ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದ ಮುಖ್ಯ ವಾಹಿನಿಗೆ ತರಲು ಸಹಕಾರ ನೀಡಬೇಕೆಂದು ಹೇಳಿದರು.

ಇದೇ ಸಂದರ್ಭ ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾದಳ ಹಾಗೂ ಶಾಲಾ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರ ಗಮನಸೆಳೆಯಿತು. ವಿವಿಧ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರುಗಳಿಗೆ ಬಹುಮಾನ ವಿತರಿಸಿ ಗೌರವಿಸಲಾಯಿತು.

ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆಚಾರ ವಿಚಾರದ ಸಂಸ್ಕೃತಿ ಪರಂಪರೆಯನ್ನು ಬಿಂಬಿಸುವ ನೃತ್ಯಗಳು ನೆರೆದಿದ್ದವರ ಮೆಚ್ಚುಗೆ ಗಳಿಸಿತು.

ಈ ಸಂದರ್ಭ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಂಕರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿಜು, ಸಿ.ಆರ್.ಪಿ ಗಳಾದ ರುಕ್ಮಿಣಿ, ಶೈಲಾ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಮಣಿಕಂಠ, ಚೆಸ್ಕಾಂ ಇಲಾಖೆಯ ಸುರೇಶ್, ಹುಂಡಿ ಶಾಲಾ ಶಿಕ್ಷಕಿ ಶೈಲಾ, ಚೆನ್ನಂಗಿ ಶಾಲಾ ಮುಖ್ಯ ಶಿಕ್ಷಕಿ ಕೆ.ಕೆ ಸುಷಾ, ಶಿಕ್ಷಕ ಅಶ್ರಫ್, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.