ಕುಶಾಲನಗರ, ಜ. ೩೦: ಜಿಲ್ಲೆಯ ಯಾವುದೇ ಭಾಗದಲ್ಲಿ ನೈತಿಕ ಪೊಲೀಸ್‌ಗಿರಿ ಕಂಡುಬAದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಎಚ್ಚರಿಸಿದರು.
ಕುಶಾಲನಗರದಲ್ಲಿ ನಡೆದ ಸೋಮವಾರಪೇಟೆ ಉಪವಿಭಾಗದ ಮಟ್ಟದ ಜನಸಂಪರ್ಕ ಸಭೆಯಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಯಾವುದೇ ರೀತಿಯ ಅಪರಾಧಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತಾಗಬೇಕು. ಅಪರಾಧ ಮುಕ್ತ ಸಮಾಜಕ್ಕಾಗಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ಕುಶಾಲನಗರದ ಆಯ್ದ ಜಾಗಗಳಲ್ಲಿ ಸಿಸಿ ಕ್ಯಾಮರಗಳನ್ನು ಅಳವಡಿಸುವ ಮೂಲಕ ಸಮರ್ಪಕ ಸಂಚಾರಿ ವ್ಯವಸ್ಥೆಗೆ ಕಾರ್ಯ ಯೋಜನೆ ರೂಪಿಸಲಾಗುವುದು. ಗ್ರಾಮ ಪಂಚಾಯಿತಿ ಪುರಸಭೆ ಸಹಯೋಗದೊಂದಿಗೆ ಈ ಸಂಬAಧ ಚರ್ಚಿಸಿ ಕ್ರಿಯಾಯೋಜನೆ ರೂಪಿಸಲಾಗುವುದು. ಸೈಬರ್ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳ ಬಗ್ಗೆ ಪ್ರತಿಯೊಬ್ಬರು ಎಚ್ಚರ ವಹಿಸಬೇಕು. ಪೊಲೀಸ್ ಇಲಾಖೆ ಮೂಲಕ ಭದ್ರತೆ ಕಲ್ಪಿಸಬಹುದೇ ಹೊರತು ನಾಗರಿಕರ ಸಿವಿಲ್ ವ್ಯಾಜ್ಯಗಳಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಹೆದ್ದಾರಿ ರಸ್ತೆಯಲ್ಲಿ ವೇಗ ನಿಯಂತ್ರಕಗಳನ್ನು ಅಳವಡಿಸುವ ಮೂಲಕ ಅಪಘಾತ ಪ್ರಕರಣಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಗಾಂಜಾ ಮತ್ತಿತರ ಮಾದಕ ವಸ್ತುಗಳ ಮಾರಾಟ ಬಳಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ದಂಧೆಯನ್ನು ಬುಡ ಸಹಿತ ಕಿತ್ತು ಹಾಕಲು ಕ್ರಮ ಕೈಗೊಳ್ಳುವ ಭರವಸೆ ವ್ಯಕ್ತಪಡಿಸಿದರು. ಶಾಲಾ-ಕಾಲೇಜು ಮಕ್ಕಳು ಗಾಂಜಾ ಮತ್ತಿತರ ಮಾದಕ ವಸ್ತುಗಳಿಗೆ ಬಲಿಯಾಗುವುದನ್ನು ತಪ್ಪಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ನಾಗರಿಕರು ತಮ್ಮ ಸಮಸ್ಯೆಗಳ ನಿವಾರಣೆಗಾಗಿ ಪೊಲೀಸ್ ತುರ್ತು ಸಹಾಯವಾಣಿ ಸಂಖ್ಯೆಗಳಾದ ೧೧೨/೧೯೩೦/೧೦೯೮ ಸಂಪರ್ಕಿಸಿ ಸಹಾಯ ಹಸ್ತ ಕೋರುವಂತೆ ಕೋರಿದರು.
ಸಭೆಯಲ್ಲಿ ಸಂಘ ಸಂಸ್ಥೆಗಳ ಪ್ರಮುಖರು ಕುಶಾಲನಗರ ಸುಂಟಿಕೊಪ್ಪ ಭಾಗದ ಸಮಸ್ಯೆಗಳ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದರು.
ಪಟ್ಟಣದಲ್ಲಿ ಆಟೋ ನಿಲ್ದಾಣಗಳ ಮೂಲಕ ಸಂಚಾರ ವ್ಯವಸ್ಥೆಗೆ ತೊಡಕು ಉಂಟಾಗುತ್ತಿರುವುದು, ಕುಶಾಲನಗರ ಪಟ್ಟಣ ಸುತ್ತಮುತ್ತ ನಿಯಮಬಾಹಿರವಾಗಿ ಮಸಾಜ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿರುವುದು, ಮೈಸೂರು ಕೊಡಗು ಗಡಿ ಭಾಗದ ಅಪರಾಧ ಸಂಬAಧ ವಿಷಯಗಳ ಬಗ್ಗೆ ನಾಗರಿಕರು ಗಮನಕ್ಕೆ ತಂದರು.
ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ, ಪೊಲೀಸ್ ಸಿಬ್ಬಂದಿ ಕೊರತೆ, ಸೈಬರ್ ಅಪರಾಧ ಬಗ್ಗೆ, ಪ್ರವಾಸಿ ಕೇಂದ್ರಗಳ ಸಮಸ್ಯೆ, ವಾರಾಂತ್ಯದಲ್ಲಿ ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ವಾಹನ ಸಂಚಾರ ದಟ್ಟಣೆ, ಹಾರಂಗಿ ಅಣೆಕಟ್ಟು ಭದ್ರತೆಯಲ್ಲಿ ಪೊಲೀಸ್ ವೈಫಲ್ಯ, ಕೂಡಿಗೆಯಲ್ಲಿ ಸಂಚಾರಿ ಪೊಲೀಸ್ ನೇಮಕ ವಿಷಯಗಳ ಬಗ್ಗೆ ಸಾರ್ವಜನಿಕರು ಗಮನ ಸೆಳೆದರು.
ಸಾರ್ವಜನಿಕರ ಅಹವಾಲನ್ನು ಆಲಿಸಿದ ಪೊಲೀಸ್ ಅಧೀಕ್ಷಕರು ಹಂತ ಹಂತವಾಗಿ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸುವ ಭರವಸೆ ಒದಗಿಸಿದರು.
ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಶಾಲನಗರ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ದಿನೇಶ್ ಕುಮಾರ್ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾಹಿತಿ ಒದಗಿಸಿದರು. ಕುಶಾಲನಗರ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಪ್ರದೀಪ್ ಬಿ.ಆರ್. ಸ್ವಾಗತಿಸಿದರು. ಸೋಮವಾರಪೇಟೆ ಇನ್ಸ್ಪೆಕ್ಟರ್ ಮುದ್ದು ಮಹಾದೇವ, ಶನಿವಾರಸಂತೆಯ ಇನ್ಸ್ಪೆಕ್ಟರ್ ಕೃಷ್ಣರಾಜು ಇದ್ದರು.